ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಹಿನ್ನಲೆ : ಸಚಿವರಿಂದ ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ ೨ ಸಾವಿರ ರೂ. ನೀಡುವ ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಯೋಜನೆಯ ಚಾಲನೆ ಬೃಹತ್ ಕಾರ್ಯಕ್ರಮ ಮೈಸೂರಿನಲ್ಲಿ ಆಗಸ್ಟ್ ೩೦ರಂದು ನಡೆಯಲಿರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಫಲಾನುಭವಿಗಳನ್ನು ಕರೆತರುವ ಸಂಬಂಧ ಕೈಗೊಂಡಿರುವ ಸಿದ್ದತೆಗಳನ್ನು ಪಶುಸಂಗೋಪನೆ, ರೇ? ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್‌ಕರ್ ಹಾಗೂ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಇಂದು ಪರಿಶೀಲಿಸಿದರು.

ಕೊಳ್ಳೇಗಾಲ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣ ಹಾಗೂ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ದತೆ ಪರಿಶೀಲನೆಗಾಗಿ ಇಂದು ನಡೆದ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಪ್ರತ್ಯೇಕ ಸಭೆಯಲ್ಲಿ ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಕರೆದುಕೊಂಡು ಹೋಗಿಬರುವ ಸಂಬಂಧ ಚಾಮರಾಜನಗರ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಸಂಪೂರ್ಣ ಸಿದ್ದತೆಗಳನ್ನು ಪರಿಶೀಲಿಸಿದರು.

ರಾಜ್ಯಸರ್ಕಾರದ ೫ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಗೃಹಲಕ್ಷ್ಮೀ ಯೋಜನೆಯಡಿ ನೊಂದಣಿಯಾಗಿರುವ ಮಹಿಳಾ ಫಲಾನುಭವಿಗಳಿಗೆ ೨ ಸಾವಿರ ರೂ. ಹಣವನ್ನು ಖಾತೆಗಳಿಗೆ ಜಮೆ ಮಾಡುವ ಕಾರ್ಯಕ್ಕೆ ಆಗಸ್ಟ್ ೩೦ರಂದು ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಬಟನ್ ಒತ್ತುವ ಮೂಲಕ ಏಕಕಾಲದಲ್ಲಿ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಯೋಜನೆಯಡಿ ೨ ಸಾವಿರ ರೂ. ಹಣ ಜಮೆಯಾಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಸಮರ್ಪಕವಾಗಿ ಹೊಣೆಗಾರಿಕೆಯಿಂದ ನಿರ್ವಹಿಸುವಂತೆ ಸಚಿವರುಗಳು ತಿಳಿಸಿದರು.

ಪಶುಸಂಗೋಪನೆ, ರೇ? ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ಮಹಿಳೆಯರಿಗೆ ನೆರವು ನೀಡುವ ರಾಜ್ಯಸರ್ಕಾರದ ಮಹತ್ವದ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಮೈಸೂರಿಗೆ ನಿಗದಿತ ಸಮಯಕ್ಕೆ ಕರೆತರಬೇಕು. ಸರ್ಕಾರವೇ ಪ್ರತಿ ಗ್ರಾಮ ಪಂಚಾಯಿತಿಯಿಂದ ಉಚಿತ ಬಸ್ಸುಗಳ ವ್ಯವಸ್ಥೆ ಮಾಡಿದೆ. ಫಲಾನುಭವಿಗಳನ್ನು ಕರೆತರಲು ನೇಮಕವಾಗಿರುವ ಸಂಬಂಧಪಟ್ಟ ನೋಡೆಲ್ ಅಧಿಕಾರಿಗಳು, ಸಿಬ್ಬಂದಿ ಜವಾಬ್ದಾರಿಯುತವಾಗಿ ಮೈಸೂರಿಗೆ ಕರೆತಂದು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್‌ಕರ್ ಅವರು ಮಾತನಾಡಿ ಮಹಿಳೆಯರ ಅರ್ಥಿಕ ಸ್ವಾವಲಂಬನೆಗಾಗಿ ರಾಜ್ಯಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಯೋಜನೆಗೆ ಶೇ. ೮೭ರಷ್ಟು ಫಲಾನುಭವಿಗಳು ನೊಂದಾಯಿಸಿಕೊಂಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಮನೆಮನೆಗೆ ತೆರಳಿ ಪ್ರೀತಿಯಿಂದ ಮಹಿಳಾ ಫಲಾನುಭವಿಗಳನ್ನು ಕರೆತರಬೇಕು. ಮಹಿಳೆಯರಿಗಾಗಿ ರೂಪಿಸಿದ ಕಾರ್ಯಕ್ರಮಕ್ಕೆ ಉತ್ತಮ ಹೆಸರು ತರಬೇಕೆಂದು ತಿಳಿಸಿದರು.

ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ದನಿ ಇಲ್ಲದವರು, ಬಡವರು ಸೇರಿದಂತೆ ಎಲ್ಲಾ ವರ್ಗದವರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದಿದೆ. ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಸರ್ಕಾರದ ಕಾರ್ಯಕ್ರಮಗಳಲ್ಲಿ ನೆರವು ನೀಡುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಕಷ್ಟ ಸುಖಗಳ ಬಗ್ಗೆ ಅರಿವು ಇದೆ. ನಿಮಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುವುದಾಗಿ ಸಚಿವರಾವ ಲಕ್ಷ್ಮೀ ಹೆಬ್ಬಾಳ್‌ಕರ್ ನುಡಿದರು.

ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ ಗೃಹಲಕ್ಷ್ಮೀ ಯೋಜನೆಯಡಿ ೧.೩೨ ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳಿಗೆ ೨ ಸಾವಿರ ರೂ. ನೆರವು ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ ೧.೧೦ ಕೋಟಿ ಫಲಾನುಭವಿಗಳು ನೊಂದಾಯಿಸಿಕೊಂಡಿದ್ದಾರೆ. ನೊಂದಣಿಯಾದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವ ಮಹತ್ತರ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಫಲಾನುಭವಿಗಳು ಬರಬೇಕು. ಇಲಾಖಾ ಅಧಿಕಾರಿಗಳು ಪೂರ್ವಸಿದ್ದತೆಯೊಂದಿಗೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಬೇಕು ಎಂದು ತಿಳಿಸಿದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ರಾಜ್ಯಸರ್ಕಾರದ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮೀ ನೊಂದಣಿಯಲ್ಲಿ ಜಿಲ್ಲೆ ೨ನೇ ಸ್ಥಾನದಲ್ಲಿದೆ. ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಚಾಲನೆ ಸಿಗುತ್ತಿದ್ದು, ಜಿಲ್ಲೆಯ ಫಲಾನುಭವಿಗಳು ಸಹಕರಿಸಬೇಕು. ಮಹಿಳೆಯರ ಸಬಲೀಕರಣಕ್ಕೆ ನೆರವಾಗಲಿರುವ ಈ ಯೋಜನೆ ಚಾಲನೆಗೆ ಫಲಾನುಭವಿಗಳು ಭಾಗವಹಿಸಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಜಿಲ್ಲೆಯಲ್ಲಿ ಕೈಗೊಂಡಿರುವ ಸಿದ್ದತೆಗಳ ಕುರಿತು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸರಸ್ವತಿ, ಉಪ ವಿಭಾಗಾಧಿಕಾರಿ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗೀತಾಲಕ್ಷ್ಮೀ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *