ಎಸ್.ಎಸ್.ಎಲ್.ಸಿ ಫಲಿತಾಂಶ ಸಾಧನೆಗೆ ಕಾಳಜಿ ವಹಿಸಿ : ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್

ಚಾಮರಾಜನಗರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ಸಾಧನೆಗೆ ಶಿಕ್ಷಕರು ವಿಶೇಷ ಕಾಳಜಿಯಿಂದ ಮಾರ್ಗದರ್ಶನ ಮಾಡಬೇಕೆಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಗುಣಾತ್ಮಕ ಕಲಿಕೆ ಹಾಗೂ ಫಲಿತಾಂಶ ಸುಧಾರಣೆ ಸಂಬಂಧ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಉತ್ತಮ ಸಾಧನೆ ಮಾಡುವಂತಾಗಬೇಕು. ಇದಕ್ಕೆ ಪೂರಕವಾಗಿ ಶಿಕ್ಷಕರು ವಿದ್ಯಾರ್ಥಿಗಳ ಅಗತ್ಯತೆಯನ್ನು ಮನಗಂಡು ವೈಯಕ್ತಿಕ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರು ಮುತುವರ್ಜಿ ವಹಿಸಬೇಕು. ವಿಶೇಷವಾಗಿ ಗಿರಿಜನ ಮಕ್ಕಳು, ನಿಧಾನಗತಿ ಕಲಿಕಾರ್ಥಿಗಳು ಹಾಗೂ ಶಾಲೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ಮುಖ್ಯ ವಾಹಿನಿಗೆ ಬರಲು ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯವನ್ನು ಆದ್ಯತೆಯ ಕ್ಷೇತ್ರಗಳೆಂದು ಪರಿಗಣಿಸಲಾಗಿದ್ದು, ಶಾಲೆಯ ಅಗತ್ಯತೆಗಳಿಗೆ ಸಂಬಂಧಿಸಿದ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸಬೇಕು ಎಂದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಶಿಕ್ಷಣಕ್ಕೆ ಪೂರಕವಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಶಾಲೆಯ ಅಭಿವೃದ್ದಿ ಕೆಲಸಗಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೂ ನೆರವು ಪಡೆಯಬೇಕು. ಶಾಲಾ ಅಭಿವೃದ್ದಿ ಕಾರ್ಯಗಳಿಗೆ ನರೇಗಾ ಯೋಜನೆ ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್ ಅವರು ಮಾತನಾಡಿ ಶಿಕ್ಷಕರನ್ನು ಒಳಗೊಂಡಂತೆ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಕ್ರಿಯಾಯೋಜನೆಯನ್ನು ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜಿಲ್ಲೆಯ ಫಲಿತಾಂಶವು ರಾಜ್ಯದಲ್ಲಿ ಮೊದಲ ಐದನೇ ಸ್ಥಾನದೊಳಗೆ ಬರುವಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.

ಇದೇ ವೇಳೆ ಕಳೆದ 2022ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ 60 ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಡಯಟ್ ಪ್ರಭಾರ ಪ್ರಾಂಶುಪಾಲರಾದ ಯು.ಆರ್. ಲಿಂಗರಾಜೇ ಅರಸ್, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *