ಚಾಮರಾಜನಗರ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಈ ಸಂಬಂಧ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲೆಯ ಜನತೆಯು ಕೈಜೋಡಿಸಿ ಸಹಕರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದ್ದಾರೆ.
ನವೆಂಬರ್ 1 ರಂದು ಜಿಲ್ಲೆಯ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯವನ್ನು ಬರೆಯಬೇಕು. ನವೆಂಬರ್ 1ರ ಬೆಳಿಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡಗೀತೆಯನ್ನು ಪ್ರಸಾರ ಮಾಡಲಾಗುವುದು. ಈ ಸಮಯದಲ್ಲಿ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಬೇಕು. ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮನೆಗಳು, ಕಚೇರಿಗಳು ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು ಎಂದು ಜಿಲ್ಲಾಧಿಕಾರಿಯವರು ಕೋರಿದ್ದಾರೆ.
ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳು, ಸರ್ಕಾರಿ, ಅರೆಸರ್ಕಾರಿ, ನಿಗಮ ಮಂಡಳಿಗಳ ಕಚೇರಿಗಳು, ಬ್ಯಾಂಕ್ಗಳು ಹಾಗೂ ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಈ ಎಲ್ಲಾ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ ಕನ್ನಡಾಂಬೆಗೆ ನಮನ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.