ಚಾಮರಾಜನಗರ, ನ.8- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 58 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಕಿವಿ ಮುಚ್ಚಿಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿವಿಮುಚ್ಚಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 58ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದುಇಂದು ಕೂಡ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿಯು ಕಿವುಡ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನಾವೆಲ್ಲರೂ ಕಿವಿಮುಚ್ವಿಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಸರ್ಕಾರಗಳು ಖಾಲಿ ಕಿವಿ ಸರ್ಕಾರವಾಗಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ ಕಿವುಡ ಸಮಿತಿಯಾಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ಮಹೇಶ್ ಗೌಡ, ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದರಾಜು, ಗು.ಪುರುಷೋತ್ತಮ್ ನಂಜುಂಡಸ್ವಾಮಿ, ಪ್ರಕಾಶ್, ತಾಂಡವಮೂರ್ತಿ, ವೀರಭದ್ರ, ಚಾ.ಸಿ.ಸಿದ್ದರಾಜು, ರಾಚಪ್ಪ,ಲಿಂಗರಾಜು ಇತರರು ಭಾಗವಹಿಸಿದ್ದರು.