ಗೌರಿ ಗಣೇಶ ತಯಾರಿಕೆ : ಪರಿಸರಸ್ನೇಹಿ ಕ್ರಮ ಪಾಲಿಸಿ

ಚಾಮರಾಜನಗರ: ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಮೂರ್ತಿಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದ್ದಾರೆ.

ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ ೧೯೭೪ರ ಪ್ರಕಾರ ಕಲಂ ೩೩(ಎ) ಅನ್ವಯ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು.

ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ವಿಸರ್ಜಿಸಬೇಕು. ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇನ್ನಿತರ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ನಗರಸಭೆ, ಪುರಸಭೆಯ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಉಪಯೋಗಿಸಬಾರದು ಎಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *