ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಇಂದು ಚಾಲನೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಒತ್ತಡದ ಕೆಲಸಗಳ ನಡುವೆಯು ಕ್ರೀಡೆಯು ಮನಸ್ಸಿನ ಸಮತೋಲನ ಕಾಪಾಡುತ್ತದೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಬಹುದು. ಹೀಗಾಗಿ ಕ್ರೀಡೆಗೆ ಎಲ್ಲರೂ ಹೆಚ್ಚು ಒತ್ತು ನೀಡಬೇಕು ಎಂದರು.
ಪೊಲೀಸ್ ಇಲಾಖೆ ಸಿಬ್ಬಂದಿಗಳು 24*7 ಗಂಟೆಯು ಕೆಲಸ ನಿರ್ವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಕ್ರೀಡೆಗಳು ಅವಶ್ಯಕವಾಗಿದೆ. ಪ್ರತಿ ವರ್ಷವು ಕ್ರೀಡಾ ಚಟುವಟಿಕೆಗಳು ನಡೆಯುವುದರಿಂದ ಆರೋಗ್ಯಕರ ಬದಲಾವಣೆ ಕಾಣಲೂ ಸಾಧ್ಯವಾಗುತ್ತದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಜಿಲ್ಲೆಯಲ್ಲಿ 25ನೇ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಆಯೋಜಿಸಿರುವುದು ಸಂತಸದ ವಿಷಯವಾಗಿದೆ. 5 ತಂಡಗಳು ಈಗಾಗಲೇ ಭಾಗವಹಿಸಿದ್ದು, ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ದಿನದ 24 ಗಂಟೆಗಳ ಕಾಲವು ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಇಂತಹ ಕ್ರೀಡಾ ಚಟುವಟಿಕೆಗಳಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಗೆಲುವು ಸೋಲಿನ ಮನೋಭಾವನೆ ಬಿಟ್ಟು ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಅವರು ಅಥ್ಲೆಟಿಕ್ ಕ್ರೀಡೆಗಳಿಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪ.ಜೆ. ಕಂಟ್ರಾಕ್ಟರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ ಟಿ.ಜೆ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.