ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿ ಪ್ರಕ್ರಿಯೆ : ಸಹಕರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಮನವಿ

ಚಾಮರಾಜನಗರ: ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆಗೆ ವೇಳಾ ಪಟ್ಟಿ ಹೊರಡಿಸಿದ್ದು ಈ ಪ್ರಕ್ರಿಯೆಗೆ ರಾಜಕೀಯ ಪಕ್ಷಗಳು ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗವು ದಿನಾಂಕ 01-11-2023ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ಪ್ರಕಟಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳು ಒಳಪಡಲಿವೆ. ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ ಎಂದರು.
ಮತದಾರರ ಪಟ್ಟಿ ತಯಾರಿಸಲು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಮತದಾರರ ನೋಂದಣಿ ಅಧಿಕಾರಿಯನ್ನಾಗಿ ಹಾಗೂ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಮತ್ತು ಆಯಾ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಿ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿಯವರು ತಿಳಿಸಿದರು.

ಭಾರತದ ಪ್ರಜೆಯಾಗಿರುವ ಮತ್ತು ಈ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1ನೇ ನವೆಂಬರ್ 2023ಕ್ಕೆ ಮೊದಲು 6 ವರ್ಷದ ಅವಧಿಯಲ್ಲಿ ಕನಿಷ್ಠ ಒಟ್ಟು 3 ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಲ್ಲದ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿದ್ದಾರೆ. ನಮೂನೆ 19ರಲ್ಲಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಅವರ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ಹಿಂದಿನ 6 ವರ್ಷಗಳಲ್ಲಿ ಒಟ್ಟು 3 ವರ್ಷಗಳು ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದರು.

ಪ್ರಮಾಣ ಪತ್ರದ ಮಾದರಿ ಮತ್ತು ನಮೂನೆ 19 ಅನ್ನು ಆಯಾ ತಾಲೂಕು ತಹಸೀಲ್ದಾರ್ ಕಚೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ದಿನಾಂಕದಂದು ಬೋಧನಾ ವೃತ್ತಿಯಲ್ಲಿ ನಿರತರಾಗಿರದಿದ್ದಲ್ಲಿ ಪ್ರಮಾಣ ಪತ್ರವನ್ನು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿಸಿರಬೇಕು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ (ಬಲ್ಕ್) ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಕಳುಹಿಸಬಹುದು ಎಂದು ತಿಳಿಸಿದರು.

ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ 19ರ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು. ಪ್ರತಿ ಸದಸ್ಯರಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಬೇಕು. ನಮೂನೆ 19ರ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ, ನಿಯೋಜಿತ ಅಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ. ಕೈ ಬರಹ, ಬೆರಳಚ್ಚು ಮಾಡಿದ ಅಥವಾ ಖಾಸಗಿಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಸ್ವೀಕರಿಸಲಾಗುತ್ತದೆ ಎಂದರು.

ಅರ್ಜಿ ನಮೂನೆ 19ನ್ನು ಸ್ವೀಕರಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನವೆಂಬರ್ 23ರಿಂದ ಡಿಸೆಂಬರ್ 9ರವರೆಗೆ ಹಕ್ಕು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತದಾರರ ಪಟ್ಟಿ ತಯಾರಿಕೆಗೆ ಪೂರಕವಾಗಿರುವ ಸಹಕಾರ ನೀಡಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮನವಿ ಮಾಡಿದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎನ್. ನಾಗಯ್ಯ, ಎಂ. ಚಿಕ್ಕಮಹದೇವು, ಎಸ್. ಬಾಲಸುಬ್ರಹ್ಮಣ್ಯ, ಎನ್. ನವೀನ್ ಕುಮಾರ್, ಚುನಾವಣಾ ತಹಶೀಲ್ದಾರ್ ರವಿಕುಮಾರ್ ವಸ್ತ್ರದ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಚುನಾವಣಾ ಶಾಖೆಯ ಶಿರಸ್ತೇದಾರರಾದ ಬಸವರಾಜು, ಇತರರು ಸಬೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *