ಚಾಮರಾಜನಗರ: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಮತದಾರರು ಹೆಸರು ನೋಂದಾಯಿಸಲು ಅವಕಾಶವಿದ್ದು, ತಹಶೀಲ್ದಾರರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಭಾರತ ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ವೇಳಾಪಟ್ಟಿ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಕನಿಷ್ಠ ಮೂರು ವರ್ಷಗಳಷ್ಟು ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆಯಿಲ್ಲದ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ಶಿಕ್ಷಕರು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದಾಗಿದೆ.
ಅರ್ಹ ಶಿಕ್ಷಕರು ನಮೂನೆ-19ರಲ್ಲಿ ನವೆಂಬರ್ 6 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಮೂಲಕ ತಾಲೂಕು ತಹಶೀಲ್ದಾರ್ ರವರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರು ನೋಂದಾಯಿಸಿಕೊಳ್ಳುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.