ನಶಾ ಮುಕ್ತ ಭಾರತ ಅಭಿಯಾನ ಯೋಜನೆಯ ವಾರ್ಷಿಕೋತ್ಸವ ಆಚರಣೆ : ಕಾಲೇಜು, ಗ್ರಾ.ಪಂ ಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಚಾಮರಾಜನಗರ: ನಶಾ ಮುಕ್ತ ಭಾರತ ಅಭಿಯಾನ ಯೋಜನೆಯು ಪ್ರಾರಂಭವಾಗಿ 5 ವರ್ಷಗಳ ಪೂರೈಸಿರುವ ಹಿನ್ನೆಲೆಯಲ್ಲಿ ಇದರ ಅಂಗವಾಗಿ ಚಾಮರಾಜನಗರ ಜಿಲ್ಲೆಯ ಕಾಲೇಜು, ವಿವಿಧ ಗ್ರಾಮ ಪಂಚಾಯಿತಿಗಳು ಹಾಗೂ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ವಾರ್ಷಿಕೋತ್ಸವ ಆಚರಣೆ ಅರ್ಥಪೂರ್ಣವಾಗಿ ನಡೆಯಿತು. 

  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆ ವಿರುದ್ದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. 

   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ. ಕೆ.ಎನ್ ಮಂಜುನಾಥ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

  ಇದೇ ವೇಳೆ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಉಂಟುಮಾಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಚಟುವಟಿಕೆಗಳ ಕುರಿತು ವಿವರಿಸಲಾಯಿತು. 

   ಜಿಲ್ಲೆಯ ವಿವಿಧ ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಸೇರಿದಂತೆ ವಿವಿಧೆಡೆ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯ 5ನೇ ವಾರ್ಷಿಕೋತ್ಸವ ಆಚರಿಸಲಾಯಿತು. ವಿದ್ಯಾರ್ಥಿಗಳು, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ದ ಅಭಿಯಾನ ಕುರಿತು ಅರಿವು ಮೂಡಿಸಿದರು.

  ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸಬೇಕು. ಮದ್ಯ ಮತ್ತು ಮಾದಕ ವಸ್ತು ಬಳಕೆಯನ್ನ ದೂರ ಇಡಬೇಕು. ಯುವಕರಲ್ಲಿ ಮಾನವೀಯ ಮೌಲ್ಯಗಳ ಬಗ್ಗೆ ತಿಳಿಸಿಕೊಡಬೇಕು ಎಂಬುವುದೂ ಸೇರಿದಂತೆ ವಿಶೇಷ ಜಾಗೃತಿ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

Leave a Reply

Your email address will not be published. Required fields are marked *