ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಇಂದು ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಲೋಕೋಪಯೋಗಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಕುರಿತು ವಿವರವಾಗಿ ಪರಾಮರ್ಶಿಸಿದ ಸಚಿವರು ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ನಿರ್ವಹಿಸಲಾಗಿರುವ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆ ಕುರಿತು ವಿಸೃತವಾಗಿ ವಿವರ ಪಡೆದರು.
ಹೆಲಿಪ್ಯಾಡ್, ರಸ್ತೆ ಅಭಿವೃದ್ದಿ, ಕಟ್ಟಡ, ಸೇತುವೆ ನಿರ್ಮಾಣ ಕಾಮಗಾರಿಗಳು ಪ್ರಗತಿಯನ್ನು ಸಚಿವರು ಪರಿಶೀಲಿಸಿದರು. ಎಸ್.ಎಚ್.ಡಿ.ಪಿ ಕಾಮಗಾರಿ ಕೈಗೊಂಡಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರಸ್ತುತ ಆಗಿರುವ ಪ್ರಗತಿಯನ್ನು ಪರಾಮರ್ಶಿಸಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿ ಇಲಾಖೆ ವತಿಯಿಂದ ನಿರ್ವಹಿಸಲಾಗಿರುವ ಕಾರ್ಯಗಳ ಕುರಿತು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಆಗಬೇಕಿರುವ ಹೊಸ ಕಾಮಗಾರಿಗಳ ಪಟ್ಟಿಯನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಂಡಿಸಿದರು. ಪ್ರಸ್ತಾವನೆಯನ್ನು ಸಮಗ್ರವಾಗಿ ಪರಿಶೀಲಿಸಿದ ಸಚಿವರಾದ ಸತೀಶ ಜಾರಕಿಹೊಳಿ ಅವರು ಈ ನಿಟ್ಟಿನಲ್ಲಿ ಅಗತ್ಯ ಸೂಚನೆಗಳನ್ನು ನೀಡಿದರು.
ಗುಣಮಟ್ಟದ ಕಾಮಗಾರಿ ನಡೆಯಬೇಕು. ಮುತುವರ್ಜಿಯಿಂದ ಕಾಮಗಾರಿ ನಿರ್ವಹಿಸಬೇಕು. ಅಭಿವೃದ್ದಿ ಕಾಮಗಾರಿಗಳು ತ್ವರಿತವಾಗಿ ಆಗಬೇಕು ಎಂದು ಲೋಕೋಪಯೋಗಿ ಸಚಿವರು ನಿರ್ದೇಶನ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ಜಿಲ್ಲೆಯ ಪ್ರಮುಖ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆ ಸೇರಿದಂತೆ ಜಿಲ್ಲೆಯ ವಿವಿದ ಭಾಗಗಳ ರಸ್ತೆಗಳನ್ನು ಅಭಿವೃದ್ದಿ ಪಡಿಸಬೇಕು ಎಂದು ಪ್ರಸ್ತಾವ ಸಲ್ಲಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಎಚ್.ಎಂ. ಗಣೇಶ್ ಪ್ರಸಾದ್ ಅವರು ಸಹ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ದಿ ಪಡಿಸಬೇಕಿರುವ ರಸ್ತೆ, ಸೇತುವೆ ಇನ್ನಿತರ ಅಭಿವೃದ್ದಿ ಕಾರ್ಯಗಳ ಸಂಬಂಧ ಸಚಿವರಲ್ಲಿ ಮನವಿ ಮಾಡಿದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ವಿನಯ್ ಕುಮಾರ್, ಎಸ್.ಎಚ್.ಡಿ.ಪಿ ಅಧೀಕ್ಷಕ ಎಂಜಿನಿಯರ್ ಕೇಶವ ಪ್ರಸಾದ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಎಸ್.ಪಿ. ಮಹೇಶ್, ಗುಣನಿಯಂತ್ರಕ ಕಾರ್ಯಪಾಲಕ ಎಂಜಿನಿಯರ್ ಕೀರ್ತಿ, ತಾಂತ್ರಿಕ ಸಹಾಯಕರಾದ ಜಿ. ರಾಮಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸದಾಶಿವಮೂರ್ತಿ, ಇನ್ನಿತರ ಅಧಿಕಾರಿಗಳು ಸಬೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಆದ್ಯತೆ ಮೇರೆಗೆ ಇಲಾಖೆ ವತಿಯಿಂದ ಕಾಮಗಾರಿ ಕೈಗೆತ್ತಿಕೊಂಡು ನಿರ್ವಹಿಸಲಾಗುತ್ತಿದೆ. ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ. ಈ ತಿಂಗಳ ಅಂತ್ಯದೊಳಗೆ ಪ್ಯಾಚಪ್ ಕೆಲಸ ಪೂರ್ಣವಾಗಲಿದೆ ಎಂದರು.
ಮಲೆ ಮಹದೇಶ್ವರ ಬೆಟ್ಟದ ರಸ್ತೆ, ಕಾಡಂಚಿನ ಗ್ರಾಮಗಳ ರಸ್ತೆ ಅಭಿವೃದ್ದಿಗೆ ಚರ್ಚಿಸಲಾಗಿದ್ದು, ಇದಕ್ಕೆ ಕ್ರಮ ವಹಿಸಲಾಗುವುದು. ವಿವಿಧ ಕಾರ್ಯಕ್ರಮದಡಿ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿವಿಧೆಡೆ ವಿಳಂಬವಾಗಿರುವುದು ಗಮನಕ್ಕೆ ಬಂದಿದೆ ಎಂದು ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದರು.