ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅಕ್ಟೋಬರ್ 28ರಂದು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ಆರಂಭದಲ್ಲಿಯೇ ಕಾರ್ಯಕ್ರಮಗಳ ಆಯೋಜನೆ ಸಂಬಂಧ ಮುಖಂಡರು ಮಾತನಾಡಿ ಕಳೆದ ಮೂರು ವರ್ಷಗಳಿಂದ ಕೋವಿಡ್ ಹಾಗೂ ಇತರೆ ಕಾರಣಗಳಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ಸಕಲ ಸಿದ್ದತೆ ವ್ಯವಸ್ಥೆಗಳೊಂದಿಗೆ ವಾಲ್ಮೀಕಿ ಜಯಂತಿ ಆಚರಣೆ ವಿಜೃಂಭಣೆಯಿಂದ ನಡೆಯಬೇಕು ಎಂದರು.
ಪ್ರತಿಭಾವಂತ ಸಮುದಾಯ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಂದು ಗೌರವಿಸಬೇಕು. ಹಿರಿಯ ಕಲಾವಿದರಾದ ಘಟಂ ಕೃಷ್ಣ, ಮಿಮಿಕ್ರಿ ಗೋಪಿ, ಜ. ಸುರೇಶ್ ನಾಗ್ ಅವರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಬೇಕು. ಅಲ್ಲದೇ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೂ ಹೆಸರು ಶಿಫಾರಸು ಮಾಡಿ ಕಳುಹಿಸಿಕೊಡಬೇಕು. ಕಾರ್ಯಕ್ರಮದಂದು ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಬೇಕು. ಎಂದಿನಂತೆ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜನೆಯಾಗಬೇಕು. ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಆಗಬೇಕು. ಸ್ವಚ್ಚತೆಗೆ ವಿಶೇಷ ಗಮನ ಹರಿಸಬೇಕು. ತಳಿರು ತೋರಣಗಳಿಂದ ಸಿಂಗರಿಸಬೇಕು ಎಂಬುದೂ ಸೇರಿದಂತೆ ಕಾರ್ಯಕ್ರಮ ಆಯೋಜನೆ ಸಂಬಂಧ ಮುಖಂಡರು ಇತರೆ ಸಲಹೆಗಳನ್ನು ನೀಡಿದರು.
ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆಯಾಗಬೇಕು ಎಂಬುದನ್ನು ಈ ಹಿಂದಿನಿಂದಲೂ ಒತ್ತಾಯಿಸಲಾಗುತ್ತಿದೆ. ಈ ಪ್ರಕ್ರಿಯೆ ಆರಂಭವಾಗಬೇಕು. ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಸಮಿತಿಗಳನ್ನು ಪುನರ್ ರಚಿಸಬೇಕು. ಎಲ್ಲಾ ಗ್ರಾಮ ಪಂಚಾಯಿತಿ, ಶಾಲಾ ಕಾಲೇಜುಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆಯಾಗಬೇಕು. ಜಿಲ್ಲಾ ಕೇಂದ್ರದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಏರ್ಪಾಡು ಮಾಡಬೇಕು ಎಂದು ಮುಖಂಡರು ಸಭೆಯಲ್ಲಿ ತಿಳಿಸಿದರು.
ಸಭೆಯ ಆರಂಭದಲ್ಲೇ ಹಲವು ಅಧಿಕಾರಿಗಳು ಸಭೆಗೆ ಹಾಜರಾಗದಿರುವ ಬಗ್ಗೆ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ದತೆ ಮಾಡಲಾಗುತ್ತದೆ. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಲಾಗುವುದು. ಮುಖ್ಯ ಭಾಷಣಕಾರರನ್ನು ಆಹ್ವಾನಿಸಲು ಸಮುದಾಯಗಳ ಮುಖಂಡರು ಸಲಹೆ ನೀಡಬೇಕು. ಸಭೆಯಲ್ಲಿ ಮುಖಂಡರು ನೀಡಿರುವ ಸಲಹೆ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದೆಂದು ತಿಳಿಸಿದರು.
ವಿವಿಧ ಸಮಿತಿಗಳು ಕಾರ್ಯೋನ್ಮುಖರಾಗಲು ಸೂಚನೆ ನೀಡಲಾಗುವುದು. ತಾಲೂಕು ಕೇಂದ್ರಗಳಲ್ಲಿಯೂ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತದೆ. ಜಿಲ್ಲಾ ಕೇಂದ್ರದಲ್ಲಿಯೂ ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಯಲು ಎಲ್ಲರ ಸಹಕಾರ ಬಯಸುವುದಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠೇರಾಜೇ ಅರಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಮುಖಂಡರಾದ ಎಂ. ರಾಮಚಂದ್ರ, ಪು. ಶ್ರೀನಿವಾಸನಾಯಕ, ಅರಕಲವಾಡಿ ಸೋಮನಾಯಕ, ಸುರೇಶ್ ನಾಯಕ, ಚಾ.ಸಿ. ಸೋಮನಾಯಕ, ಜಿ. ಬಂಗಾರು, ಜ. ಸುರೇಶ್‍ನಾಗ್, ಮಹದೇವನಾಯಕ, ಘಟಂಕೃಷ್ಣ, ಚಂಗುಮಣಿ, ಕಪನಿನಾಯಕ, ಬ್ಯಾಡಮೂಡ್ಲು ಬಸವಣ್ಣ, ರಮೇಶ್, ಪರಶಿವಮೂರ್ತಿ, ಲಕ್ಷ್ಮಣ್‍ನಾಯಕ, ಮಹೇಂದ್ರ, ನಟರಾಜು, ಇತರೆ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.