ವ್ಯಕ್ತಿ ಶಾರೀರಿಕವಾಗಿ ಆರೋಗ್ಯವಾಗಿದ್ದರೆ ಉತ್ತಮ ಮನಸ್ಥಿತಿ ಹೊಂದಲು ಸಾಧ್ಯ : ಎಂ. ಕಾಶೀನಾಥ್

ಚಾಮರಾಜನಗರ: ಯಾವುದೇ ವ್ಯಕ್ತಿ ಶಾರೀರಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಉತ್ತಮ ಮನಸ್ಥಿತಿ ಹೊಂದಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಎಂ. ಕಾಶೀನಾಥ್ ಅವರು ಅಭಿಪ್ರಾಯಪಟ್ಟರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿಂದು ಹಮ್ಮಿಕೊಳ್ಳಲಾಗಿದ್ದ 14/17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪ್ರಾಂಶುಪಾಲರಾದ ಎಂ. ಕಾಶೀನಾಥ್ ಅವರು ಧಜಾರೋಹಣ ನೆರವೇರಿಸಿ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಎಂ. ಕಾಶೀನಾಥ್ ಅವರು ದೈಹಿಕ, ಮಾನಸಿಕ ಹಾಗೂ ಶಾರೀರಿಕ ಆರೋಗ್ಯ ಉತ್ತಮಗೊಳಿಸಲು ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಬಾಲ್ಯಾವಸ್ಥೆಯಿಂದಲೇ ಪ್ರೇರೇಪಿಸಬೇಕು. ಮಕ್ಕಳು ಪುಸ್ತಕಗಳನ್ನು ಓದುವುದಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕು. ಅದರಲ್ಲೂ ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಮಕ್ಕಳಿಗೆ ದೈಹಿಕ ಹಾಗೂ ಮಾನಸಿಕ ಸ್ಥೈರ್ಯ ಇಮ್ಮಡಿಯಾಗಲಿದೆ ಎಂದರು.

ಇತ್ತೀಚೆಗೆ ಭಾರತದ ಯುವಜನತೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಒಲಂಪಿಕ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಹೆಚ್ಚಿನ ಪದಕಗಳನ್ನು ಗಳಿಸುವ ನಿಟ್ಟಿನಲ್ಲಿ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಯುವಂತೆ ಮಾಡಬೇಕು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆ ಕೀರ್ತಿ ತರಬೇಕು ಎಂದು ಪ್ರಾಂಶುಪಾಲರಾದ ಎಂ. ಕಾಶೀನಾಥ್ ಅವರು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಂಕರ್, ಜಿಲ್ಲಾ ದೈಹಿ ಶಿಕ್ಷಣ ಸಂಘದ ಅಧ್ಯಕ್ಷರಾದ ನಾಗಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಣ್ಣ, ಎಲ್ಲಾ ತಾಲೂಕುಗಳ ದೈಹಿಕ ಶಿಕ್ಷಣ ಪರಿವೀಕ್ಷಕರು, ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *