ಚಾಮರಾಜನಗರ:ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಮೆರೆಯುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ ಅವರು ಸಲಹೆ ಮಾಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಚಾಮರಾಜನಗರ ತಾಲೂಕುಮಟ್ಟದ ದಸರಾ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಸಾಧನೆಗೈಯ್ಯಲು ದಸರಾ ಕ್ರೀಡಾಕೂಟವು ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನವಾಗಿ ಸ್ವೀಕರಿಸಿ ವಿಭಾಗಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶಿವಸ್ವಾಮಿ ಅವರು ತಿಳಿಸಿದರು.
ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಿಕ್ಕ ಬಸವಯ್ಯ ಅವರು ಮಾತನಾಡಿ ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಶಿಕ್ಷಣದ ಜೊತೆಗೆ ಕ್ರೀಡೆಯೂ ಬಹುಮುಖ್ಯವಾಗಿದೆ. ಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸದೃಢವಾಗಲಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷರಾದ ಬಿ. ಮೋಹನ್‌ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಕ್ರೀಡೆಯ ಮಹತ್ವ ಕುರಿತು ಮಾತನಾಡಿದರು.
ರಾಜ್ಯ ದೈಹಿಕ ಶಿಕ್ಷಣ ಸಂಘದ ಉಪಾಧ್ಯಕ್ಷರಾದ ಜೋಸೆಫ್, ಇತತರ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಇದ್ದರು.