5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ತನ್ನ ಚುನಾವಣಾ ಗ್ಯಾರಂಟಿಗಳನ್ನು ಪೂರೈಸಲು ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿದ್ದು, ಈ ಹಿನ್ನೆಲೆ ಫಲಾನುಭವಿಗಳಿಗೆ ಹೆಚ್ಚುವರಿ ೫ ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ ೩೪ ರೂ.ನಂತೆ ಹಣ ಪಾವತಿಸಲು ನಿರ್ಧರಿಸಲಾಗಿದೆ.

ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೆಜಿ ಅಕ್ಕಿ ಜೊತೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಂಗ್ರಹಿಸಲು ಸಾಧ್ಯವಾಗದ ಕಾರಣ ಜುಲೈನಿಂದಲೇ ಹಣ ಪಾವತಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಭಾರತೀಯ ಆಹಾರ ನಿಗಮ ಪ್ರತಿ ಕೆಜಿ ಅಕ್ಕಿಗೆ ೩೪ ರೂಪಾಯಿಗಳ ಪ್ರಮಾಣಿತ ದರವನ್ನು ನಿಗದಿಪಡಿಸಿರುವುದರಿಂದ ಪ್ರತಿಯೊಬ್ಬ ಫಲಾನುಭವಿಗೆ ೩೪ ರುಪಾಯಿ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ನಾವು ಅಕ್ಕಿ ಖರೀದಿಸಲು ಎಲ್ಲಾ ಪ್ರಯತ್ನ ಮಾಡಿದೆವು. ಆದರೆ ನಮಗೆ ಅಗತ್ಯವಿರುವಷ್ಟು ಅಕ್ಕಿಯನ್ನು ಪೂರೈಸಲು ಯಾವುದೇ ಸಂಸ್ಥೆ ಮುಂದೆ ಬಂದಿಲ್ಲ. ಹೀಗಾಗಿ ಅಕ್ಕಿ ಖರೀದಿ ತಡವಾಗುತ್ತಿದೆ. ಹೀಗಾಗಿ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಒಂದು ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿ ಇದ್ದರೆ, ಆ ವ್ಯಕ್ತಿಗೆ ಅನ್ನ ಭಾಗ್ಯ ಯೋಜನೆಯಡಿ ಐದು ಕೆಜಿ ಹೆಚ್ಚುವರಿ ಅಕ್ಕಿಗೆ ತಿಂಗಳಿಗೆ ೧೭೦ ರೂ. ಸಿಗುತ್ತದೆ ಎಂದು ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ ೧೦ ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ. ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು.

Leave a Reply

Your email address will not be published. Required fields are marked *