ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 30ರಂದು ಕೊಳ್ಳೇಗಾಲಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಇಂದು ಕೊಳ್ಳೇಗಾಲದಲ್ಲಿ ಸ್ಥಳ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊಳ್ಳೇಗಾಲ ಪಟ್ಟಣದ ಎಂಜಿಎಸ್.ವಿ ಕಾಲೇಜು ಮೈದಾನದಲ್ಲಿ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಗೆ ಸ್ಥಳ ಪರಿಶೀಲಿಸಿದರು.
ಇದೇ ವೇಳೆ ಕಾರ್ಯಕ್ರಮಕ್ಕಾಗಿ ಹಾಕಬೇಕಿರುವ ಬೃಹತ್ ಶಾಮಿಯಾನ, ವೇದಿಕೆ, ಸಭಿಕರ ಆಸನಗಳು, ಇನ್ನಿತರ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಗೆ ಶಾಸಕರು ಅಗತ್ಯ ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರ ವಾಹನ ನಿಲುಗಡೆ, ಕುಡಿಯುವ ನೀರು, ಉಪಹಾರ ವ್ಯವಸ್ಥೆ, ಶೌಚಾಲಯ, ತಾತ್ಕಾಲಿಕ ಆರೋಗ್ಯ ಘಟಕ ನಿರ್ಮಾಣ ಸೇರಿದಂತೆ ಇನ್ನಿತರ ವ್ಯವಸ್ಥೆಗಳಿಗೆ ಸ್ಥಳ ಪರಿಶೀಲಿಸಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಶಾಸಕರು ನಿರ್ದೇಶನ ನೀಡಿದರು.
ಮಹದೇಶ್ವರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿ ನಿರ್ಮಾಣ ಮಾಡಬೇಕಿರುವ ಹೆಲಿಪ್ಯಾಡ್ ಸಂಬಂಧ ಸ್ಥಳ ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಉಪಮುಖ್ಯಮಂತ್ರಿಗಳು, ವಿವಿಧ ಇಲಾಖೆಗಳ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಯಳಂದೂರಿನಲ್ಲಿ ನಿರ್ಮಾಣ ಮಾಡಲಾಗಿರುವ ಸುಸಜ್ಜಿತ ಆಸ್ಪತ್ರೆ, ಹಾಸ್ಟೆಲ್, ಇನ್ನಿತರ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಸಂತೇಮರಹಳ್ಳಿಯ 5 ಕೋಟಿ ರೂ. ವೆಚ್ಚದ ಎಳನೀರು ಮಾರುಕಟ್ಟೆ, ಕೊಳ್ಳೇಗಾಲದಲ್ಲಿ 250 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯ ಮೊದಲ ಹಂತವಾಗಿ 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಗೆ ಭೂಮಿ ಪೂಜೆ, ಮುಡಿಗುಂಡ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಹೀಗೆ ಹಲವಾರು ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ ಎಂದು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ಡಿವೈಎಸ್‍ಪಿ ಮೋಹನ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಇತರೆ ಇಲಾಖೆಗಳ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಇದ್ದರು.
Related