ಚಾಮರಾಜನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕೊಳ್ಳೇಗಾಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಗೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ದೊರೆಯಿತು.
ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಥಾಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ಅವರು ಚಾಲನೆ ನೀಡಿದರು.
ಇದೇ ವೇಳೆ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಅವರು ಇಂದಿನಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಪ್ರಾರಂಭವಾಗಿದ್ದು, ಮತದಾರರ ಪಟ್ಟಿ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರು ತಪ್ಪದೇ ಭಾಗವಹಿಸಬೇಕು ಎಂದರು.
ಭಾರತ ಸಂವಿಧಾನದ 326ನೇ ವಿಧಿಯ ಪ್ರಕಾರ ಭಾರತದ ಪ್ರತಿಯೊಬ್ಬ ಪ್ರಜೆಯು ಮತದಾರರಾಗುವುದು ಸಂವಿಧಾನಾತ್ಮಕ ಹಕ್ಕಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರಂಗಳನ್ನು ನೀಡಲಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರತಿಯೊಬ್ಬರೂ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು.
ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಪ್ರಕ್ರಿಯೆ ನಡೆಯಲಿದ್ದು, ತಾಲೂಕಿನ ಯಾವೊಬ್ಬ ಮತದಾರರು ಮತದಾನದಿಂದ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯಿಂದ ದೂರ ಉಳಿಯದೆ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಕುಮಾರ್ ಅವರು ತಿಳಿಸಿದರು.
ಜಾಥಾ ಕಾರ್ಯಕ್ರಮವು ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಯ ವೃತ್ತದಿಂದ ಆರಂಭವಾಗಿ ಪಟ್ಟಣದ ಡಾ. ರಾಜ್ ಕುಮಾರ್ ರಸ್ತೆಯ ಮಾರ್ಗವಾಗಿ ಸಾಗಿ ನಗರದ ಬಸ್ ನಿಲ್ದಾಣ ಮತ್ತು ಎಂ.ಜಿ.ಎಸ್.ವಿ ಕಾಲೇಜು ರಸ್ತೆ ಮೂಲಕ ತಾಲೂಕು ಪಂಚಾಯಿತಿ ಆವರಣದಲ್ಲಿ ಮುಕ್ತಾಯವಾಯಿತು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಸಂದೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ, ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.