ಜಾನುವಾರುಗಳ ಅಸ್ವಾಭಾವಿಕ ಮರಣ ಹಿನ್ನೆಲೆ : ಮುನ್ನೆಚ್ಚರಿಕೆ ಕ್ರಮಕ್ಕಾಗಿ ಅಧಿಕಾರಿಗಳ ಸಮಿತಿ ರಚಿಸಿ ಜಿಲ್ಲಾಧಿಕಾರಿ ಶ್ರೀರೂಪ ಆದೇಶ

ಚಾಮರಾಜನಗರ: ಹನೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಗೂ ಪಳನೀಮೇಡು ಗ್ರಾಮಗಳಲ್ಲಿ ಜಾನುವಾರುಗಳು ಅಸ್ವಾಭಾವಿಕವಾಗಿ ಮರಣ ಹೊಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈ ರೀತಿಯ ದುರ್ಘಟನೆಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಆದೇಶಿಸಿದ್ದಾರೆ. 

  ಕೊಳ್ಳೇಗಾಲ ಉಪವಿಭಾಗಾಧಿಕಾರಿ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಚಾಮರಾಜನಗರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಕೊಳ್ಳೇಗಾಲ, ಚಾಮರಾಜನಗರ ಆರಕ್ಷಕ ಉಪ ಅಧೀಕ್ಷಕರು, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಸಮಿತಿಯ ಸದಸ್ಯರಾಗಿರುತ್ತಾರೆ. ಜಿಲ್ಲೆಯ ಎಲ್ಲಾ ಸ್ಥಳೀಯ ಪಶು ವೈದ್ಯಾಧಿಕಾರಿಗಳು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. 

   ಸಮಿತಿಯು ಜಿಲ್ಲೆಯಲ್ಲಿನ ಗ್ರಾಮಗಳಲ್ಲಿ ಜಾನುವಾರುಗಳು ಅಸ್ವಾಭಾವಿಕವಾಗಿ ಮರಣ ಹೊಂದಿರುವ ಬಗ್ಗೆ ವರದಿಯಾದಲ್ಲಿ ತಕ್ಷಣವೇ ತುರ್ತು ಅಗತ್ಯ ಕ್ರಮಗಳನ್ನು ಕೈಗೊಂಡು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಈ ರೀತಿಯಲ್ಲಿ ಮೃತಪಟ್ಟ ಜಾನುವಾರುಗಳ ಮರಣೋತ್ತರ ಪರೀಕ್ಷಾ ವರದಿಯು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಬರುವವರೆಗೆ ಹಾಲಿ ಮೃತಪಟ್ಟಿರುವ ಗ್ರಾಮಗಳಲ್ಲಿನ ಜಾನುವಾರುಗಳ ಚಲನ ವಲನಗಳನ್ನು ನಿಬರ್ಂಧಿಸಲು ಕ್ರಮವಹಿಸಬೇಕು. ಜಿಲ್ಲೆಯ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ರಚಿಸಲಾಗಿರುವ ಸಮಿತಿಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸ್ಥಳದಲ್ಲಿದ್ದು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *