ನ. 15ರಂದು ನಗರದಲ್ಲಿ ಬಿರ್ಸಾ ಮುಂಡಾ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

ಚಾಮರಾಜನಗರ: ಜನಜಾತೀಯ ಗೌರವ ದಿವಸ ಅಂಗವಾಗಿ ಇದೇ ತಿಂಗಳ 15ರಂದು ಬುಡಕಟ್ಟು ನಾಯಕ ‘ಶ್ರೀ ಬಿರ್ಸಾ ಮುಂಡಾ ಅವರ ಜಯಂತಿ’ ಕಾರ್ಯಕ್ರಮವನ್ನು ನಗರದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.

  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಭಗವಾನ್ ಶ್ರೀ ಬಿರ್ಸಾ ಮುಂಡಾ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

  ಬಿರ್ಸಾ ಮುಂಡಾ ಅವರು 1875ರಲ್ಲಿ ಜನಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ 1900ರಲ್ಲಿ ವೀರಮರಣವನ್ನಪ್ಪಿದರು. ಕೇವಲ 25 ವರ್ಷಗಳು ಜೀವಿಸಿದ್ದ ಅವರ ತ್ಯಾಗ, ಬಲಿದಾನ, ಹೋರಾಟ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿದೆ. ಬುಡಕಟ್ಟು ಜನರ ನಡೆ-ನುಡಿ, ಆಚಾರ-ವಿಚಾರ, ಸಂಸ್ಕøತಿಯನ್ನು ಪ್ರತಿನಿಧಿಸುವ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಬಹಳ ಅರ್ಥಪೂರ್ಣವಾಗಿ ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಹಮ್ಮಿಕೊಳ್ಳಬೇಕಾಗಿದೆ ಎಂದರು. 

  ನವೆಂಬರ್ 15ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಬೆಳ್ಳಿರಥದಲ್ಲಿ ಅಲಂಕೃತಗೊಂಡ ಭಗವಾನ್ ಬಿರ್ಸಾ ಮುಂಡಾ ಅವರ ಭಾವಚಿತ್ರ ಮೆರವಣಿಗೆಯು ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆ, ವೇದಿಕೆ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ವ್ಯವಸ್ಥಿತ ಆಯೋಜನೆಗೆ ಮುಂದಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.   

ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರ ಪ್ರಕಾರವೇ ಮುದ್ರಿಸಿ ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲಾಗುವುದು. ಬಿರ್ಸಾ ಮುಂಡಾ ಅವರ ಕುರಿತು ಹೆಚ್ಚಿನ ಅರಿವಿರುವ ಹಾಗೂ ಜನಸಾಮಾನ್ಯರಿಗೆ ಬಿರ್ಸಾ ಮುಂಡಾ ಅವರ ಆದರ್ಶ ಚಿಂತನೆಗಳನ್ನು ಪ್ರಸ್ತುತಪಡಿಸುವ ಉತ್ತಮ ಭಾಷಣಕಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿದೆ. ಕಾರ್ಯಕ್ರಮದಲ್ಲಿ ಬುಡಕಟ್ಟು ಜನರ ಸಂಸ್ಕ್ರತಿ ಅನಾವರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬುಡಕಟ್ಟು ಜನರ ಒಳಿತಿಗಾಗಿ ಸಾಧನೆಗೈದ ವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕಿದೆ. ಒಟ್ಟಿನಲ್ಲಿ ಕಾರ್ಯಕ್ರಮ ಉತ್ತಮವಾಗಿ ಮೂಡಿಬರಲು ಅಧಿಕಾರಿಗಳು ಈಗಿನಿಂದಲೇ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಮೆರವಣಿಗೆ ಸಾಗುವ ಮಾರ್ಗವು ಸ್ವಚ್ಚತೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ತಳಿರು-ತೋರಣಗಳಿಂದ ಸಿಂಗರಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಸ್ವಚ್ಚತೆ ಸೇರಿದಂತೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ವತಿಯಿಂದ ಮಾಡಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ತಪಾಸಣಾ ಶಿಬಿರ ಏರ್ಪಡಿಸಿ ಕಾರ್ಯಕ್ರಮಕ್ಕೆ ಆಗಮಿಸುವ ಆದಿವಾಸಿಗಳಿಗೆ ಅಗತ್ಯ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಯೋಜನೆ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಒದಗಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಹೇಳಿದರು.

ಇದೇ ವೇಳೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ವ್ಯಾಪ್ತಿಯ ಮೈಸೂರು ವಿಭಾಗದ ಕ್ಷೇತ್ರ ಪ್ರಚಾರಾಧಿಕಾರಿ ಶೃತಿ ಅವರು ಮಾತನಾಡಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ಯೋಜನೆ ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಮಳಿಗೆ ತೆರೆದು ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದರು.

 ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ. ಮಂಜುನಾಥ್, ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಿಳಿಗಿರಿರಂಗನ ಬೆಟ್ಟದ ಸಿ. ಮಾದೇಗೌಡ, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *