ಚಾಮರಾಜನಗರ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಡಿಲೀಟ್ ಮಾಡುವ ಮೂಲಕ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಹಾಗೂ ಹಿಂದುಳಿದ ವರ್ಗಗಳ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಕೆಲಸ ನಡೆಯುತ್ತಿದೆ ಎಂದರು.
ಸರಗೂರುಮೋಳೆ ಗ್ರಾಮದಲ್ಲಿ ಉಪ್ಪಾರ ಸಮುದಾಯಕ್ಕೆ ಸೇರಿದ 40 ಮಂದಿ ಮತದಾರರು ಮೃತಪಟ್ಟಿದ್ದಾರೆ ಎಂದು ತಪ್ಪಾಗಿ ನಮೂದಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಈ ವಿಚಾರ ತಿಳಿದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಹೆಸರುಗಳನ್ನು ಸರಿಪಡಿಸಲಾಗಿದೆ ಎಂದರು.
ಇದೇ ರೀತಿಯಲ್ಲಿ ಬದುಕಿರುವ 796 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಮುಂದಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಕೈಬಿಡದಂತೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಕಾಡಾ ಅಧ್ಯಕ್ಷರಾದ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಯೋಗೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಹೆಚ್.ವಿ.ಚಂದ್ರು ಇದ್ದರು.