ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕರೂ ಆಗಿದ್ದ ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಹಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.
2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲನುಭವಿಸಿದ್ದರು. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇಂದು ಸಂಜೆ 4 ಗಂಟೆಗೆ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.