ಗುಂಡ್ಲುಪೇಟೆ ತಾಲೂಕಿನ 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 475 ಕೋಟಿ ರೂ. ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ಒಟ್ಟು 523 ಕೋಟಿ ರೂ. ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದ್ದು, ಗುಂಡ್ಲುಪೇಟೆ ತಾಲೂಕು ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

   ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿಂದು ತಾಲೂಕಿನ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

    ನಂಜನಗೂಡು ತಾಲೂಕಿನ ಗಾಂಧಿ ಗ್ರಾಮದ ಬಳಿಯ ಕಬಿನಿ ನದಿಯಿಂದ ನೀರನ್ನು ಎತ್ತಿ ಗುಂಡ್ಲುಪೇಟೆ ತಾಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸಲಾಗುತ್ತಿದೆ. ಇದರಿಂದ ತಾಲೂಕಿನಲ್ಲಿ ಅಂತರ್ಜಲ ಹೆಚ್ಚಾಗಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಅನುದಾನ ನೀಡಿ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸಲಾಗುತ್ತಿದೆ. ಸ್ಥಳೀಯ ಶಾಸಕರ ಒತ್ತಾಸೆಯಿಂದ ಇದು ಸಾಧ್ಯವಾಗಿದೆ ಎಂದರು.  

   ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಸಾಧಿಸುತ್ತಿರುವುದಕ್ಕೆ ಇಂದು ಗುಂಡ್ಲುಪೇಟೆಯಲ್ಲಿ ನಡೆದಿರುವ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ. ಸರ್ಕಾರ ನುಡಿದಂತೆ ನಡೆದಿದೆ. ಸರ್ಕಾರ ಜಾರಿಗೆ ಬಂದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಒಟ್ಟು 1 ಲಕ್ಷ 60 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಸಮಾಜದಲ್ಲಿ ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಸೇರಿದಂತೆ ಎಲ್ಲರ ವರ್ಗಗಳ ಪರವಾಗಿ ಕೆಲಸ ಮಾಡುತ್ತಿದೆ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ಸರ್ಕಾರವು ನಂಬಿಕೆ ಇಟ್ಟಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

  ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಇಂಧನ, ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳ ಮೂಲಕ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತೆರಕಣಾಂಬಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 30 ಹಾಸಿಗೆಗಳ ಆಸ್ಪತ್ರೆಯನ್ನಾಗಿಸಲಾಗಿದೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ನಾಳೆಯಿಂದಲೇ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು. 

   ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಧೈರ್ಯ ತುಂಬಿವೆ. ಅಂತರ್ಜಲ ವೃದ್ಧಿಸಲು ಕೆರೆಗಳನ್ನು ತುಂಬಿಸಲಾಗುತ್ತಿದೆ. ಕ್ಷೇತ್ರದ ಮಾಜಿ ಸಚಿವರಾದ ದಿ. ಎಚ್.ಎಸ್. ಮಹದೇವಪ್ರಸಾದ್ ಅಭಿವೃದ್ಧಿ ಕೆಲಸಗಳನ್ನು ಅವರ ಪುತ್ರರಾದ ಗಣೇಶ್ ಪ್ರಸಾದ್ ಅವರು ಮುಂದುವರೆಸುತ್ತಿದ್ದಾರೆ. ಹಸಿವುಮುಕ್ತ, ಬಡತನಮುಕ್ತ, ಅಸಮಾನತೆ ಮುಕ್ತ, ಅನಾರೋಗ್ಯ ಮುಕ್ತ ರಾಜ್ಯವನ್ನಾಗಿಸುವುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದರು. 

  ಲೋಕೊಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಮಾತನಾಡಿ ಕೆರೆಗೆ ನೀರು ತುಂಬಿಸುವ ಯೋಜನೆ ಗುಂಡ್ಲುಪೇಟೆಯಲ್ಲಿ ಮಾತ್ರವಲ್ಲ, ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಆಗಬೇಕು. ಜಿಲ್ಲೆಯ ಅಭಿವೃದ್ಧಿಗೆ ಕಳೆದ ವರ್ಷ ನಡೆದ ಸಂಪುಟ ಸಭೆಯಲ್ಲಿ ವಿಶೇಷ ಅನುದಾನ ನೀಡಲಾಗಿದೆ. ಜಿಲ್ಲೆಯನ್ನು ಪ್ರವಾಸಿತಾಣವಾಗಿ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿವೆ. ತಾಲೂಕುವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮನವಿ ಸಲ್ಲಿಸಿದ್ದಾರೆ. ಮನವಿಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ತಿಳಿಸಿದರು.

  ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಮಾತನಾಡಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಈ ಭಾಗದ ರೈತರಿಗೆ ತುಂಬಾ ಅನುಕೂಲವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಸರ್ಕಾರವು ಬಡವರು, ರೈತರ, ಮಹಿಳೆಯರ ಪರವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಹನೂರು ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡಿದ್ದಾರೆ ಎಂದು ಹೇಳಿದರು.  

  ಪ್ರಾಸ್ತವಿಕವಾಗಿ ಮಾತನಾಡಿದ ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ತಾಲೂಕಿನ ಇತಿಹಾಸದಲ್ಲಿಯೇ ಇದೊಂದು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ್ದಾರೆ. ಇದರಿಂದ ತಾಲೂಕಿನ 100ಕ್ಕೂ ಹೆಚ್ಚು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲಿದೆ. ರಾಜ್ಯದಲ್ಲಿಯೇ ಮೊದಲಬಾರಿಗೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡ ಆರಂಭವಾಗಿದೆ. ಪಟ್ಟಣದ ಒಳಚರಂಡಿ ವ್ಯವಸ್ಥೆಗಾಗಿ ಅನುದಾನ ಸರ್ಕಾರದಿಂದ ಮಂಜೂರಾಗಿದೆ ಎಂದರು. 

   ಗುಂಡ್ಲುಪೇಟೆ ತಾಲೂಕು ಕೇರಳ ಹಾಗೂ ತಮಿಳುನಾಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದ್ದು, ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಸಂಚಾರಿ ಠಾಣೆ ಅತ್ಯಾವಶ್ಯಕವಾಗಿದೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಆರಂಭವಾಗಿದೆ. ಮುಖ್ಯಂಮತ್ರಿಗಳು ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನ ತಂದು ತಾಲೂಕು ಅಭಿವೃದ್ಧಿಗೆ ಕಾಳಜಿ ವಹಿಸಲಾಗುವುದೆಂದು ಶಾಸಕರಾದ ಗಣೇಶ್ ಪ್ರಸಾದ್ ತಿಳಿಸಿದರು.

  ಇದೇ ವೇಳೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ 25 ಮಂದಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. 

   ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ದರ್ಶನ್ ಧ್ರುವನಾರಾಯಣ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಾಜಿ ಸಚಿವರಾದ ಗೀತಾ ಮಹದೇವಪ್ರಸಾದ್, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *