ಬಾಲ್ಯವಿವಾಹ ಮುಕ್ತ ಜಿಲ್ಲೆ ಅಭಿಯಾನ : ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿಸುವ ಅಭಿಯಾನಕ್ಕೆ ರೂಪಿಸಲಾಗಿರುವ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಜಿಲ್ಲಾಮಟ್ಟದ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಚಾಮರಾಜನಗರ ಜಿಲ್ಲೆಯನ್ನು ನವೆಂಬರ್ 14ರ ವೇಳೆಗೆ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಈಗಾಗಲೇ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮ ಸಭೆಗಳನ್ನು ಏರ್ಪಡಿಸಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಆರೋಗ್ಯ, ಶಿಕ್ಷಣ, ಕಂದಾಯ, ಪೊಲೀಸ್ ಇನ್ನಿತರ ಇಲಾಖೆಗಳು ಹೆಚ್ಚು ಮುತುವರ್ಜಿಯಿಂದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕು ಎಂದರು. 

ಇದೇ ಜುಲೈ 21ರಂದು ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಬಾಲ್ಯವಿವಾಹ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕು. ಹಂತ ಹಂತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ನವೆಂಬರ್ 14ರ ವೇಳೆಗೆ ಉದ್ದೇಶಿತ ಗುರಿಯನ್ನು ತಲುಪಬೇಕು. ಪರಸ್ಪರ ಸಮನ್ವಯ ಸಹಕಾರದಿಂದ ಇಲಾಖೆಗಳು ಕಾಯ್ದೆ ಅನುಸಾರ ಮಕ್ಕಳ ಹಕ್ಕುಗಳು ರಕ್ಷಣೆ ಕುರಿತ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಶಾಲೆಯಲ್ಲಿ ಮಕ್ಕಳ ಹಾಜರಾತಿ ಬಗ್ಗೆ ಗಮನಿಸಬೇಕು. ಯಾವುದೇ ವಿದ್ಯಾರ್ಥಿ ಮೂರು ದಿನಗಳ ಕಾಲ ಕಾರಣವಿಲ್ಲದೇ ಶಾಲೆಗೆ ಗೈರು ಹಾಜರಾದ್ದಲ್ಲಿ ಶಿಕ್ಷಕರು ಅಧಿಕಾರಿಗಳು ಪೋಷಕರ ಮನೆಗೆ ಭೇಟಿ ನೀಡಿ ಕಾರಣ ತಿಳಿದುಕೊಳ್ಳಬೇಕು. ಸತತ ಗೈರು ಹಾಜರಾಗುತ್ತಿದ್ದಲ್ಲಿ ಕೌನ್ಸಲಿಂಗ್ ಮೂಲಕ ಸಮಸ್ಯೆ ಅರಿತುಕೊಂಡು ವಿದ್ಯಾರ್ಥಿಗಳು ಶಾಲೆ ತೊರೆಯದಂತೆ ನೋಡಿಕೊಳ್ಳಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕಾಲ ಕಾಲಕ್ಕೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಮಾತನಾಡಿ ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಿದ ಮಕ್ಕಳನ್ನು ನಿಯಮಾನುಸಾರ ನಡೆಸಿಕೊಳ್ಳಬೇಕು. ಅವರ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುವ ಸೌಲಭ್ಯಗಳಿಗೆ ಅವಕಾಶ ಕಲ್ಪಿಸಬೇಕು. ಮಕ್ಕಳ ಹಕ್ಕುಗಳು, ರಕ್ಷಣೆ, ಬಾಲ್ಯವಿವಾಹ ತಡೆಗಟ್ಟುವಿಕೆಗೆ ಎಲ್ಲಾ ಇಲಾಖೆಗಳು ಯೋಜನಾ ಬದ್ದವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ ಬಾಲ್ಯವಿವಾಹ ತಡೆಗೆ ಪ್ರತಿ ಇಲಾಖೆಗಳ ಜವಾಬ್ದಾರಿ ಇದೆ. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ವ್ಯಾಪಕವಾದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಇಲಾಖೆಗಳು ಹಾಕಿಕೊಳ್ಳಬೇಕಿದೆ. ತಮ್ಮ ಕಚೇರಿ ಮುಂಭಾಗಗಳಲ್ಲಿ ಜನರಿಗೆ ಅರಿವು ಉಂಟು ಮಾಡುವ ಸಂದೇಶಗಳನ್ನೊಳಗೊಂಡ ಪೋಸ್ಟರ್ ಫಲಕಗಳನ್ನು ಪ್ರದರ್ಶಿಸಬೇಕಿದೆ ಎಂದರು.

ಜಿಲ್ಲೆಯಲ್ಲಿ ಸಾಕಷ್ಟು ಧಾರ್ಮಿಕ ಸ್ಥಳಗಳು, ಪ್ರವಾಸಿ ತಾಣಗಳು ಇವೆ. ಇಂತಹ ಸ್ಥಳಗಳಲ್ಲಿಯು ಜಾಗೃತಿ ಮೂಡಿಸುವ ಫಲಕಗಳನ್ನು ಅಳವಡಿಸಿದ್ದಲ್ಲಿ ಪರಿಣಾಮಕಾರಿಯಾಗಿ ಸಂದೇಶ ತಿಳಿಯಲಿದೆ. ಎನ್.ಆರ್.ಎಲ್.ಎಂ ಮಹಿಳಾ ಸ್ವ ಸಹಾಯ ಸಂಘಗಳು, ಅಂಗನವಾಡಿ ಆರೋಗ್ಯ ಕಾರ್ಯಕರ್ತೆಯರನ್ನು ತೊಡಗಿಸಿಕೊಂಡು ಇಲಾಖೆಗಳು ಸಮಾವೇಶಗಳನ್ನು ಆಯೋಜಿಸುವ ಮೂಲಕ ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿ ಕೊಡಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಡಿವೈಎಸ್‍ಪಿ ಲಕ್ಷ್ಮಯ್ಯ, ತಹಶೀಲ್ದಾರ್ ಬಿ. ಗಿರಿಜಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಹೆಚ್.ಆರ್. ಸುರೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಬಿ.ಎಂ. ಪ್ರಕಾಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಎಂ. ಮಹೇಶ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಲತಾ, ಸದಸ್ಯರಾದ ಲೀನಾ ಕುಮಾರಿ, ಎನ್. ಅರುಣ್ ಕುಮಾರ್, ಕೆ. ಶ್ವೇತಾ, ಗಾಯತ್ರಿ, ಬಾಲನ್ಯಾಯ ಮಂಡಳಿ ಸದಸ್ಯರಾದ ಎನ್.ಎಂ ಸರಸ್ವತಿ, ವಿ.ಹೆಚ್. ಗಂಗಾಧರ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *