- ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಪುಟ್ಟರಂಗಶೆಟ್ಟಿ ಮನವಿ
ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆ.30ರಂದು ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಯಳಂದೂರು ಪಟ್ಟಣದಲ್ಲಿರುವ 100 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮಹಿಳಾ ಘಟಕದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಏರ್ಪಡಿಸಿದ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾಭಿವೃದ್ಧಿಗೆ ಅನುದಾನವೂ ಬಿಡುಗq ೆಯಾಗಿರಲಿಲ್ಲ. ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡಲಾಗಿತ್ತು. 2013ರಿಂದ 2018ರವರೆಗೆ ಹಾಗೂ 2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜಿಲ್ಲೆಗೆ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ ಎಂದು ಹೇಳಿದರು.
ಜಿಲ್ಲೆಯನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿದ್ದು, ಗೋಶಾಲೆಗಳನ್ನು ತೆರೆದು ಜಾನುವಾರುಗಳಿಗೆ ಮೇವು ಒದಗಿಸಲಾಗುವುದು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಯೋಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಿನಿಂದಲೇ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು ಎಂದರು.
ಮುಖ್ಯಮAತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ಸೆ.30ರಂದು ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮಹಿಳಾ ಘಟಕದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕೊಳ್ಳೇಗಾಲಕ್ಕೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಅದ್ದೂರಿ ಸ್ವಾಗತ ಕೋರಬೇಕು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ, ಆರ್.ಮಹದೇವ, ಜಿಲ್ಲಾ ಕಾಂಗ್ರಸ್ ಉಪಾಧ್ಯಕ್ಷ ದಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ತೋಟೇಶ್, ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ, ಮಾಜಿ ಅಧ್ಯಕ್ಷೆ ಲತಾಜತ್ತಿ, ನಗರ ಸಭಾ ನಾಮನಿರ್ದೇಕ ಸ್ಬಾಮಿ, ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಭಾಗ್ಯೆಮ್ಮ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್ (ನಗು), ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಚಾಮರಾಜನಗರ ತಾಲೂಕು ಅಧ್ಯಕ್ಷ ಸೋಮೇಶ್ವರ್, ಸದಸ್ಯರಾದ ಮರಿಯಾಲಹುಂಡಿ ಕುಮಾರ್, ಜಿಪಂ ಮಾಜಿ ಸದಸ್ಯರಾದ ಶಿವಕುಮಾರ್, ಕೆರಹಳ್ಳಿನಮೀನ್ ಕಾವೇರಿ ಶಿವಕುಮಾರ್, ಜಿ.ಎನ್.ಲೋಕೇಶ್, ಕೆ,ಪಿ,ಸಿಸಿ ಸದಸ್ಯ ಸೈಯದ್‌ರಫಿ, ನಾಯಜ್, ಆಯಿಭ್‌ಖಾನ್, ಗ್ರಾ,ಪಂ ಮಾಜಿ ಅಧ್ಯಕ್ಷ ರೋಪೇಶ್, ವೀರಭದ್ರಸ್ವಾಮಿ, ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರು, ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
