ಬಸವ ಮಂಟಪ ಕೃತಿ ವಿವಾದ ಲೇಖಕ ರವಿಹಂಜ್ ವಿರುದ್ಧ ಎಸ್ಪಿ ಕಚೇರಿಯಲ್ಲಿ ದೂರು ದಾಖಲು

ಚಾಮರಾಜನಗರ: ಬಸವ ಮಂಟಪ ಕೃತಿಯಲ್ಲಿ ಬಸವಣ್ಣನವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿ ಲೇಖಕ ರವಿಹಂಜ್ ವಿರುದ್ಧ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ ಮುತ್ತುರಾಜು ಅವರಿಗೆ ದೂರು ನೀಡಲಾಯಿತು.

12ನೇ ಶತಮಾನದ ಮಹಾನ್ ಮಾನವತಾವಾದಿ, ಸಮಾನತೆಯ ಹರಿಕಾರ, ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ವಿಶ್ವಗುರು ಬಸವಣ್ಣನವರ ಕುರಿತು ರವಿಹಂಜ್ ಎಂಬುವವರು ನೀಡಿರುವ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆ ಖಂಡನೀಯ, ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರು ಇಡೀ ಮಾನವಕುಲಕ್ಕೆ ಸಮಾನತೆ, ಕಾಯಕ, ದಾಸೋಹ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹಾನ್ ಸಮಾಜ ಸುಧಾರಕರು. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ.

ಅಲ್ಲದೆ, ಸಮಾಜದಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ ಯಾವುದೇ ಮಹಾನ್ ವ್ಯಕ್ತಿಗಳ ಕುರಿತು ಉದ್ದೇಶಪೂರ್ವಕ ಅವಹೇಳನ, ದ್ವೇಷ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಆಗಾಗಿ ಅವರನ್ನು ಬಂಧಿಸಿ ಕ್ರಮಕೈಗೊಳ್ಳಬೇಕು. ಬಸವಮಂಟಪ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ಜೆಡಿಎಸ್ ಮುಖಂಡ ಮಲ್ಲಿಕಾರ್ಜುನಸ್ವಾಮಿ, ಆಲೂರುಮಲ್ಲು, ತಾ.ಪಂ.ಮಾಜಿ ಉಪಾಧ್ಯಕ್ಷ ದಯಾನಿಧಿ, ಮುಖಂಡರಾದ ಕೋಡಿಮೋಳೆ ರಾಜಶೇಖರ್, ಕರಿನಂಜನಪುರ ವೀರಭದ್ರಸ್ವಾಮಿ. ಎನ್‌ರಿಚ್ ಮಹದೇವಸ್ವಾಮಿ, ಕಾವುದವಾಡಿ ಗುರು, ಆರ್.ವಿ.ಮಹದೇವಸ್ವಾಮಿ. ಮನೋಜ್‌ಪಟೇಲ್… ಅರಕಲವಾಡಿ ಗುರುಸ್ವಮಿ, ಆಲೂರು ರಮೇಶ್‌ಬಾಬು, ನಂಜದೇವನಪುರ ಪುರುಷೋತ್ತಮ, ಆ‌ರ್.ಎಂ.ಸಿದ್ಧ ಮಲ್ಲ ಪ್ಪ, ಕಾಗಲವಾಡಿ ಬಸವರಾಜು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *