ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಸಂವಿಧಾನ ದಿನ ಆಚರಣೆ

ಚಾಮರಾಜನಗರ: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಇಂದು ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್. ಕಟ್ಟಡದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಜೆ. ಕೃಷ್ಣ ಅವರು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಅವರು ಸಂವಿಧಾನವನ್ನು ನಾವು ಸ್ವಯಂ ಅಂಗೀಕರಿಸಿಕೊಂಡಿದ್ದೇವೆ. ಲಿಖಿತ ರೂಪದ ನಮ್ಮ ಭಾರತದ ಸಂವಿಧಾನವು ಇಡೀ ಜಗತ್ತಿನಲ್ಲಿಯೇ ಶ್ರೇಷ್ಠವೆನಿಸಿದೆ. ಸಂವಿಧಾನವು ಮೂಲಭೂತ ಹಕ್ಕುಗಳು, ಸ್ವತಂತ್ರವಾಗಿ ಜೀವಿಸುವ ಅಧಿಕಾರ ನೀಡಿದೆ. ಸಂವಿಧಾನ ಓದಿ ಅರ್ಥೈಸಿಕೊಂಡು ಪ್ರತಿಯೊಬ್ಬರು ಅನುಸರಿಸಬೇಕು ಎಂದು ನ್ಯಾಯಾಧೀಶರಾದ ಎಸ್.ಜೆ. ಕೃಷ್ಣ ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ ಹಲವಾರು ಮಹನೀಯರು ತ್ಯಾಗ ಬಲಿದಾನದಿಂದ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕ ನಂತರ ದೇಶದಲ್ಲಿ ಸುಗಮ ಜೀವನ ನಡೆಸಲು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ನೆರವಾಯಿತು. 6 ರಿಂದ 14 ವರ್ಷದ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಸಾರ್ವಜನಿಕ ಆಸ್ತಿ ರಕ್ಷಣೆ, ಪುರುಷ ಮತ್ತು ಮಹಿಳಾ ಸಮಾನತೆ, ಕಾನೂನಿನ ಮುಂದೆ ಎಲ್ಲರೂ ಸಮಾನರು ಇಂತಹ ಹಲವಾರು ವಿಷಯಗಳು ಕಾನೂನಿನಲ್ಲಿ ಅಡಕವಾಗಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ರಾಮಸಮುದ್ರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸ್ಮಿತಾ ನಾಗಲಾಪುರ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಎಂ. ಶಿವರಾಮು, ಜಂಟಿ ಕಾರ್ಯದರ್ಶಿ ಹಾಗೂ ಸಿ.ಸಿ. ರಮೇಶ್, ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಜಿ.ಪಿ. ಸುರೇಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *