ಚಾಮರಾಜನಗರ: 223-ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ಸಿಗೆ ಮತದಾರರು ಸಹರಿಸುವಂತೆ ಮತದಾರರ ನೊಂದಣಾಧಿಕಾರಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಡಾ. ವಸುಂಧರ ಹೆಗ್ಡೆ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಆಹಾರ ಇಲಾಖೆ ಉಪನಿರ್ದೇಶಕರ ಕಚೇರಿ ಕೊಠಡಿಯಲ್ಲಿಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಭಾರತ ಚುನಾವಣಾ ಆಯೋಗದ ನಿರ್ದೆಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್.ಐ.ಆರ್) ಚಾಮರಾಜನಗರ ತಾಲೂಕಿನಲ್ಲಿಯೂ ಕೈಗೊಳ್ಳಲಾಗುತ್ತಿದೆ ಎಂದರು.
ಮತದಾರರ ಪಟ್ಟಿ ಸಿದ್ದಪಡಿಸುವಿಕೆಯಲ್ಲಿ ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹ ನಾಗರಿಕರು ಸೇರ್ಪಡೆಗೊಂಡಿರುವುದನ್ನು ಹಾಗೂ ಅರ್ಹರು ಮತದಾರರ ಪಟ್ಟಿಯಿಂದ ಕೈಬಿಡದಿರುವುದನ್ನು ಖಚಿತಪಡಿಸಿಕೊಳ್ಳಲು, ಮುಕ್ತ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಮತದಾರರ ಪಟ್ಟಿಯ ವಿಶ್ವಾರ್ಹತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿದೆ ಎಂದು ಹೇಳಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ 239 ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಮತಗಟ್ಟೆ ಅಧಿಕಾರಿಗಳಿಗೆ 3 ಬಾರಿ ತರಬೇತಿಯನ್ನು ಸಹ ನೀಡಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 105796 ಪುರುಷರು, 111826 ಮಹಿಳೆಯರು ಹಾಗೂ 16 ಮಂದಿ ಇತರರು ಸೇರಿದಂತೆ ಒಟ್ಟು 217638 ಮಂದಿ ಮತದಾರರಿದ್ದಾರೆ ಎಂದು ತಿಳಿಸಿದರು.
ದಿನಾಂಕ 01-10-2026 ಅನ್ನು ಅರ್ಹತಾ ದಿನಾಂಕ ಎಂದು ಪರಿಗಣಿಸಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಜೂನ್ 30 ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಮತಗಟ್ಟೆಗಳ ಪುನರ್ ವಿಂಗಡಣೆ ಜುಲೈ 29ರೊಳಗೆ ನಡೆಯಲಿದೆ. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5ರಂದು ಪ್ರಕಟಿಸಲಾಗುತ್ತದೆ. ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರವರೆಗೆ ಹಕ್ಕು ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶವಿದೆ. ಆಗಸ್ಟ್ 5 ರಿಂದ ಅಕ್ಟೋಬರ್ 3ರವರೆಗೆ ಹಕ್ಕು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ವಿವರಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮಾನ್ಯತೆ ಪಡೆದ ಎಲ್ಲ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನೇಮಿಸಲು ಕೋರಲಾಗಿದೆ ಎಂದು ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಡಾ. ವಸುಂಧರ ಹೆಗ್ಡೆ ಅವರು ವಿವರಿಸಿದರು.
ಚಾಮರಾಜನಗರ ತಾಲೂಕು ತಹಶೀಲ್ದಾರ್ ಬಿ. ಗಿರಿಜಾ ಅವರು ಪತ್ರಿಕಾ ಗೋಷ್ಠಿಯಲ್ಲಿ ಇದ್ದರು.