ಚಾಮರಾಜನಗರ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕಾಗಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ ಅನುಸಾರ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ತೊಂದರೆ ತಡೆಗಟ್ಟುವ ನಿಟ್ಟಿನಲ್ಲಿ ನ್ಯಾಯಾಲಯದ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವ ಸಂಬಂಧ ರಚಿಸಲಾಗಿರುವ ಜಿಲ್ಲಾಮಟ್ಟದ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ವೋಚ್ಚ ನ್ಯಾಯಾಲಯವು ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಆದೇಶ ನೀಡಿದೆ. ಈ ಆದೇಶ ಅನುಸಾರ ನಗರ ಸ್ಥಳೀಯ ಸಂಸ್ಥೆಗಳು ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಾವಳಿ ಅನ್ವಯ ಸಕಲ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಬೀದಿ ನಾಯಿಗಳನ್ನು ಸಂತಾನ ಹರಣ ಶಸ್ತ್ರ ಚಿಕಿತ್ಸೆಗೊಳಿಸುವ ಕುರಿತು ಪ್ರಾಣಿ ಕಲ್ಯಾಣ ಮಂಡಳಿಯಿಂದ ಮಾನ್ಯತೆ ಪಡೆದ ಎನ್.ಜಿ.ಒ ಗಳಲ್ಲದೆ ಹೆಚ್ಚಿನ ಸಂಸ್ಥೆಗಳಿಂದ ಪ್ರಸ್ತಾವನೆ ಪಡೆದು ನಿಯಮಾನುಸಾರ ಕ್ರಮವಹಿಸಬೇಕು ಎಂದರು.
ಸರ್ಕಾರಿ, ಖಾಸಗಿ ಶೈಕ್ಷಣಿಕ ಸಂಸ್ಥೆಗಳು, ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವೈದ್ಯಕೀಯ ಕಾಲೇಜುಗಳು ಒಳಗೊಂಡಂತೆ ಆಸ್ಪತ್ರೆಗಳು, ಸಾರ್ವಜನಿಕ ಕ್ರೀಡಾಂಗಣಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ಬಸ್ ಡಿಪೋ, ರೈಲು ನಿಲ್ದಾಣ, ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿರುವ ಎಲ್ಲ ಬೀದಿ ನಾಯಿಗಳನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳು ಸೆರೆ ಹಿಡಿದು ಅವುಗಳ ಸಂತನಾ ಹರಣ ಶಸ್ತ್ರ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕಿದೆ. ಸಾರ್ವಜನಿಕರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದಿಲ್ಲವೆಂದು ಖಚಿತ ಪಡಿಸುವ ನಿಟ್ಟಿನಲ್ಲಿ ನಾಯಿ ಆಶ್ರಯ ಕೇಂದ್ರಗಳಲ್ಲಿ ಇರಿಸಲು ನ್ಯಾಯಾಲಯವು ನಿರ್ದೇಶನ ನೀಡಿದೆ ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಹಿಡಿದ ನಂತರ ಅವುಗಳಿಗೆ ಆಶ್ರಯ ನೀಡಲು ನಿಗದಿತ ಕಟ್ಟಡ, ಸ್ಥಳಗಳಿಗೆ ಸ್ಥಳಾಂತರಿಸಬೇಕು. ರೇಬಿಸ್ ಪೀಡಿತ ನಾಯಿಗಳನ್ನು ಪ್ರತ್ಯೇಕ ಕಟ್ಟಡ ಸ್ಥಳಗಳಲ್ಲಿ ನಿರ್ವಹಣೆ ಮಾಡಬೇಕು. ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಾವಳಿ ಅನ್ವಯ ಎಲ್ಲ ರಕ್ಷಣೆ, ಆಹಾರ, ಆರೋಗ್ಯ ಪಾಲನೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ಹೇಳಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಸಮಿತಿಯು ಸಭೆ ಸೇರಿ ನ್ಯಾಯಾಲಯದ ನಿರ್ದೇಶನಗಳನ್ನು ಪರಿಪಾಲಿಸಿ ಅನುಪಾಲನಾ ವರದಿಯನ್ನು ಸಲ್ಲಿಸಬೇಕಾಗಿದೆ. ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ಎಲ್ಲ ಸಾರ್ವಜನಿಕ ಸಂಸ್ಥೆಗಳು ಓರ್ವ ಸಮನ್ವಾಧಿಕಾರಿಯನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶೃತಿ, ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಡಾ. ಮಂಜುನಾಥ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಚಿದಂಬರ, ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಸಚಿವರಾದ (ಮೌಲ್ಯಮಾಪನ) ಜಿ.ವಿ. ವೆಂಕಟರಮಣ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ತಾಲೂಕು ಪಶು ವೈದ್ಯಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ಇನ್ನಿತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related