ಚಾಮರಾಜನಗರ: ಎಚ್‍ಐವಿ ಸೋಂಕಿನ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಹಾಗೂ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಅವರು ಹೇಳಿದರು.
ನಗರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ರೆಡ್‍ಕ್ರಾಸ್, ಸಮುದಾಯ ಆಧಾರಿತ ಸ್ವಯಂಸೇವಾ ಸಂಸ್ಥೆಗಳು, ರೋಟರಿ ಸಿಲ್ಕ್ ಸಿಟಿ, ನಾಗ ಕೈವಲ್ಯ ಎಂಟರ್‍ಪ್ರೈಸಸ್ ಹಾಗೂ ಈಶ್ವರಿ ಟ್ರ್ಯಾಕ್ಟರ್ಸ್ ಡೀಲರ್‍ಶಿಪ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರೆಡ್ ರಿಬ್ಬನ್ ಓಟ ಮ್ಯಾರಥಾನ್-2026 ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.
ಎಚ್‍ಐವಿ ದೇಹದ ರೋಗನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ. ಇದರಿಂದ ವಿವಿಧ ಕಾಯಿಲೆಗಳ ವಿರುದ್ಧ ಹೋರಾಡುವ ಸಾಮಥ್ರ್ಯ ಕಡಿಮೆಯಾಗುತ್ತದೆ. ಹೀಗಾಗಿ ಎಚ್‍ಐವಿ ಸೋಂಕಿನ ಕುರಿತು ಸರಿಯಾದ ಮಾಹಿತಿ ಹೊಂದಿರುವುದು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಎಚ್‍ಐವಿ ಸೋಂಕು ಸಾಮಾನ್ಯವಾಗಿ ಮುಟ್ಟುವುದರಿಂದ, ಜೊತೆಯಲ್ಲಿ ಕುಳಿತುಕೊಳ್ಳುವುದರಿಂದ ಅಥವಾ ಸಾಮಾನ್ಯ ಸಾಮಾಜಿಕ ಸಂಪರ್ಕದಿಂದ ಹರಡುವುದಿಲ್ಲ. ಈ ಕುರಿತು ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಿ, ಸೋಂಕಿತರ ಬಗ್ಗೆ ತಾರತಮ್ಯ ಮಾಡದಂತೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಮ್ಯಾರಥಾನ್‍ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿ ಎಚ್‍ಐವಿ ಜಾಗೃತಿ ಸಂದೇಶವನ್ನು ಸಾರಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ರವಿಕುಮಾರ್, ಚಾಮರಾಜನಗರ ವಿವಿ ದೈಹಿಕ ಶಿಕ್ಷಣ ವಿಭಾಗದ ಶಾಂತರಾಜು, ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ವೇತಾ ಶಶಿಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.