ಚಾಮರಾಜನಗರ: ದಲಿತ ಹಿರಿಯ ರಾಜಕಾರಣಿ, ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ವರಿಷ್ಟರನ್ನು ದಲಿತ ಮುಖ್ಯಮಂತ್ರಿ ಹೋರಾಟ ಸಮಿತಿ ಅಧ್ಯಕ್ಷ ದಲಿತ್ ರಾಜ್ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿಯೂ ಪಕ್ಷವನ್ನು ಮುನ್ನಡೆಸಿದರು.ಅಲ್ಲದೆ ಮೂರು ಬಾರಿ ಗೃಹ ಸಚಿವರಾಗಿ, ವಿವಿಧ ಮಂತ್ರಿ ಪದವಿಗಳನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಅವರನ್ನು ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.
ದಲಿತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ದಲಿತರಿಗೆ ಬಿಟ್ಟು ಕೊಡುವ ಮೂಲಕ ದಲಿತರ ಋಣತೀರಿಸುವ ಕೆಲಸ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಯಾಗಿ ಮಾಡಬೇಕು ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಾಣಬೇಕಾಗುತ್ತದೆ ಎಂದು ದಲಿತ್ ರಾಜ್ ಎಚ್ಚರಿಸಿದರು.
ಪಂಚಶೀಲ ಫೌಂಡೇಶನ್ ಬಂಗಾರಸ್ವಾಮಿ , ಗೂಳೀಪುರ ಅರ್ಜುನ್ ಮಾತನಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೃಷ್ಣರಾಜು, ಮಹೇಶ್ ಗಾಳೀಪುರ ಹಾಜರಿದ್ದರು.