ಸಿಎಂಗೆ ಕಪ್ಪು ಭಾವುಟ ಪ್ರದರ್ಶಿಸಲು ನಿರ್ಧಾರ: ಕೆಲ್ಲಂಬಳ್ಳಿಸೋಮನಾಯಕ

ಚಾಮರಾಜನಗರ: ಜಿಲ್ಲೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅ. 30 ರಂದು ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಎಚ್ಚರಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ. ಅವರು ಮಾತನಾಡಿ. ಜಿಲ್ಲೆಯಲ್ಲಿ ಮಾನವ- ಪ್ರಾಣಿ ಸಂಘರ್ಷ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೈತರ ಮೇಲೆ ಆನೆ, ಹುಲಿ ದಾಳಿ ಮಾಡುತ್ತಿದ್ದು, ಬಡಗಲಪುರದಲ್ಲಿ. ರೈತ ಬಸವಣ್ಣ, ಕುಳ್ಳೂರಿನಲ್ಲಿ ಒಬ್ಬ, ಗುಂಡ್ಲುಪೇಟೆ ತಾಲೂಕಿನಲ್ಲಿ ಓರ್ವ ಮೃತಪಟ್ಟಿದ್ದಾರೆ. ಜಿಲ್ಲೆಯು ಬರದಿಂದ ಕಂಗೆಟ್ಟಿದ್ದು.. ಕೆರೆಕಟ್ಟೆಗಳು ಬರಿದಾಗಿದ್ದು, ಅಂತರ್ಜಲ ಮೂಲಗಳೇ ಮುಚ್ಚಿ ಹೋಗಿದ್ದು ಜನ, ಜನುವಾರುಗಳಿಗೆ ಕುಡಿಯುವ ನೀರಿಗೆ ಪರಿತಪಿಸುವಂತಹ ವಾತಾವರಣ ಸೃಷ್ಠಿಯಾಗಿದೆ. ಆದರೂ ಕೂಡ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅರಣ್ಯಸಚಿವರು ಸೌಜನ್ಯಕ್ಕಾದರೂ ಜಿಲ್ಲೆಗೆ ಭೇಟಿ ನೀಡಿ ಕಾಡುಪ್ರಾಣಿಗಳಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳಿಲ್ಲ ಅರಣ್ಯ ಅಧಿಕಾರಿಗಳು ಬೋನು ಇಡುತ್ತಾರೆ ಹೊರತು ಹುಲಿ ಸೆರೆಹಿಡಿಯುತ್ತಿಲ್ಲ. ಇದರಿಂದ ರೈತರು ತಮ್ಮ ಹೊಲ, ಗದ್ದೆ, ತೋಟಗಳಿಗೆ ಹೋಗಲು ಭಯಪಡುವಂತಾಗಿದೆ ಎಂದರು.
ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕೆಲಸಗಳು ಯಾವುದೇ ಆಗುತ್ತಿಲ್ಲ. ಎಲ್ಲ ಪರ್ಸೆಂಟ್ ಅಡಿಯಲ್ಲಿ ಕೆಲಸಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಬಹಳಷ್ಟು ರಸ್ತೆಗಳು ಆಗಬೇಕು. ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಚಾಮರಾಜನಗರ ನಗರಸಭೆ ಸ್ಥಿತಿ ಗ್ರಾಮ ಪಂಚಾಯಿತಿಗಿಂತ ಕಡಿಮೆಯಾಗಿದೆ. ಜಿಲ್ಲೆ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಕೆಲ್ಲಂಬಳ ಸೋಮನಾಯಕ ತಿಳಿಸಿದರು.
ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲು ಆಗ್ರಹ: ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಲೂರುಮಲ್ಲು ಮಾತನಾಡಿ, ರಾಜ್ಯ ಸರ್ಕಾರವು ಜಿಲ್ಲೆಯ 5 ತಾಲೂಕುಗಳನ್ನು ಬರ ಎಂದು ಘೋಷಣೆ ಮಾಡಿದೆ ಹೊರತು ಯಾವುದೇ ಅನುಷ್ಠಾನ ಮಾಡುತ್ತಿಲ್ಲ. ಮೇವು ಕೇಂದ್ರ ತೆರೆದಿಲ್ಲ. ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿಲ್ಲ. ಜಿಲ್ಲೆಯ ಜನತೆ ಬರದಿಂದ ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿಗಳಿಗೆ ನಮ್ಮ ಸಮಿತಿ ರಾಜ್ಯಾಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜಿ.ಎಂ.ಶಂಕ‌ರ್, ತಾಲೂಕು ಅಧ್ಯಕ್ಷ ಮಹದೇವಸ್ವಾಮಿ ಕಲರ್, ಟೌನ್ ಅಧ್ಯಕ್ಷ ಕಾಳನಹುಂಡಿ ಮಲ್ಲಿಕ್ ಹಾಜರಿದ್ದರು.

Leave a Reply

Your email address will not be published. Required fields are marked *