ಚಾಮರಾಜನಗರ: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಇಂದು ಭೇಟಿ ನೀಡಿದರು.
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹಾಗೂ ವೆಂಕಟಯ್ಯನ ಛತ್ರ ಶಾಲೆಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಭೇಟಿ ನೀಡಿ, ಪರೀಕ್ಷೆಗಳು ಸುಗಮ, ಪಾರದರ್ಶಕ ಮತ್ತು ನ್ಯಾಯಸಮ್ಮತವಾಗುವಂತೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮಾಡಲಾಗಿರುವ ಭದ್ರತಾ ವ್ಯವಸ್ಥೆಗಳು, ಕುಡಿಯುವ ನೀರು, ಸ್ವಚ್ಛತೆ ಮತ್ತು ಅಗತ್ಯ ಮೂಲ ಸೌಕರ್ಯಗಳು, ಪರೀಕ್ಷಾ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆ, ಅಕ್ರಮಗಳನ್ನು ತಡೆಗಟ್ಟುವ ಕ್ರಮಗಳು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಮತ್ತು ತುರ್ತು ನೆರವು ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ವೀಕ್ಷಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಗರದ ಸರ್ಕಾರಿ ಬಾಲಕಿಯರು ಹಾಗೂ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ತೆರೆಯಲಾಗಿದ್ದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಪರೀಕ್ಷಾ ಕೇಂದ್ರದ ಶಾಲೆಯ ಹೊರ ಭಾಗದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ರೋಟರಿ ಸಂಸ್ಥೆ ಸಹಯೋಗದಲ್ಲಿ ಗುಲಾಬಿ ಹೂ, ಪೆನ್ನು, ಸಿಹಿ ವಿತರಿಸಿ ಸ್ವಾಗತಿಸಿದರು. ಪರೀಕ್ಷೆಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟೀಲ್ ಇದ್ದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೊದಲ ದಿನವಾದ ಇಂದು ಪ್ರಥಮ ಭಾಷೆ ಪರೀಕ್ಷೆ ನಡೆದಿದೆ. 5536 ಬಾಲಕರು, 5491 ಬಾಲಕಿಯರು ಸೇರಿದಂತೆ ಒಟ್ಟು 11027 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, ಇವರಲ್ಲಿ 5457 ಬಾಲಕರು, 5454 ಬಾಲಕಿಯರು ಸೇರಿದಂತೆ 10911 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 79 ಬಾಲಕರು, 37 ಬಾಲಕಿಯರು ಸೇರಿದಂತೆ ಒಟ್ಟು 116 ವಿದ್ಯಾರ್ಥಿಗಳು ಇಂದು ನಡೆದ ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.