ಚಾಮರಾಜನಗರ ನಗರಸಭೆ ಕಚೇರಿಗೆ ಜಿಲ್ಲಾಧಿಕಾರಿ ಶ್ರೀರೂಪ ದಿಢೀರ್ ಭೇಟಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಇಂದು ಮಧ್ಯಾಹ್ನದ ಬಳಿಕ ಚಾಮರಾಜನಗರ ನಗರಸಭೆ ಕಚೇರಿಗೆ ದಿಢೀರ್ ಭೇಟಿ ನೀಡಿ ಕಚೇರಿಯ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳ ವಿಲೇವಾರಿ ಪ್ರಗತಿ ಪರಿಶೀಲಿಸಿದರು.

ಪರಿಶೀಲನೆ ವೇಳೆ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯದೇ, ಅನಗತ್ಯ ವಿಳಂಬವಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕರ ಅರ್ಜಿಗಳು ಮತ್ತು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿ ಮಾಡಬೇಕು. ವಿಳಂಬ ಧೋರಣೆ ಸಹಿಸುವುದಿಲ್ಲ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತಾಕೀತು ಮಾಡಿದರು.

ಸಾರ್ವಜನಿಕರಿಗೆ ಸಮಯೋಚಿತ, ಪಾರದರ್ಶಕ ಹಾಗೂ ಗುಣಮಟ್ಟದ ಸೇವೆ ಒದಗಿಸುವುದು ಆಡಳಿತದ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಿದರೆ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದೆಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದರು.

ನಗರಸಭೆ ಕಚೇರಿಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು.

ನಗರಸಭೆ ಆಯುಕ್ತರಾದ ಪರಶುರಾಮ್ ಛಲವಾದಿ,ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಾಶ್,ಪರಿಸರ ಎಂಜಿನಿಯರ್ ರೂಪ ಇದ್ದರು.

Leave a Reply

Your email address will not be published. Required fields are marked *