ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರು ಜಿಲ್ಲೆಯ ವಿವಿಧ ತಾಲೂಕುಗಳ ಹಾಸ್ಟೆಲ್, ವಸತಿಶಾಲೆ, ಆಸ್ಪತ್ರೆ, ಇಂದಿರಾ ಕ್ಯಾಂಟಿನ್ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ವ್ಯಾಪಕವಾಗಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲಿಗೆ ಉಮ್ಮತ್ತೂರಿನಲ್ಲಿರುವ ಬಾಳೆದಿಂಡಿನಿಂದ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿರುವ ವರ್ಷ ಶ್ರೀಕಂಠಸ್ವಾಮಿ ಅವರ ಆಕೃತಿ ಇಕೋ ಫ್ರೆಂಡ್ಲಿ ಎಂಟರ್ ಪ್ರೈಸಸ್ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಮಹಿಳೆಯರಿಂದ ತಯಾರಿಸಲ್ಪಡುವ ಕರಕುಶಲ ವಸ್ತುಗಳ ಮಾರಾಟ ಹಾಗೂ ಮಾರುಕಟ್ಟೆ ಉತ್ತೇಜನಕ್ಕೆ ಜಿಲ್ಲಾಡಳಿತ ಅನುಷ್ಠಾನಗೊಳಿಸುತ್ತಿರುವ ಚಾಮರಸಿ ಕಾರ್ಯಕ್ರಮದಡಿ ತರಬೇತಿ ನೀಡುವಂತೆಯು ಜಿಲ್ಲಾಧಿಕಾರಿ ಶ್ರೀರೂಪ ಅವರು ಪ್ರಸ್ತಾಪಿಸಿದರು. ಚಾಮರಸಿ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಸಮಾಲೋಚಿಸಿದರು.
ಘಟಕದಲ್ಲಿ ಬಾಳೆದಿಂಡಿನಿಂದ ತಯಾರಿಸಿರುವ ಚಾಪೆ, ಬುಟ್ಟಿ, ಕೈಚೀಲ, ಹಪ್ಪಳ, ಉಪ್ಪಿನಕಾಯಿ, ಇನ್ನಿತರ ಉತ್ಪನ್ನಗಳನ್ನು ಜಿಲ್ಲಾಧಿಕಾರಿಯವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಯಳಂದೂರು ಪಟ್ಟಣದ ಐತಿಹಾಸಿಕ ಬಳೆಮಂಟಪಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಅಲ್ಲಿನ ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ಥಳೀಯರು ನೀಡಿದ ಸಲಹೆಗಳನ್ನು ಸ್ವೀಕರಿಸಿ ಅಗತ್ಯ ಕ್ರಮ ವಹಿಸುವುದಾಗಿ ತಿಳಿಸಿದರು. ಇಂದಿರಾ ಕ್ಯಾಂಟಿನ್ ಗೆ ತೆರಳಿ ಪರಿಶೀಲಿಸಿದರು. ಗ್ರಾಹಕರ ಸಂಖ್ಯೆಗೆ ಅನುಗುಣವಾಗಿ ಆಹಾರ ತಯಾರಿಸಿ ಪೂರೈಸಲಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಇನ್ನು ಮುಂದೆ ಇಂತಹ ಸಮಸ್ಯೆಗಳು ಕೇಳಿ ಬರಬಾರದು. ಗ್ರಾಹಕರ ಬೇಡಿಕೆಗೆ ಅನುಸಾರವಾಗಿ ಇಂದಿರಾ ಕ್ಯಾಂಟಿನ್ ಕಾರ್ಯನಿರ್ವಹಿಸಬೇಕು. ಗುಣಮಟ್ಟ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಯಳಂದೂರು ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಗೂ ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಕಟ್ಟಡ ಕಾಮಗಾರಿ ವೀಕ್ಷಿಸಿದರು. ವಿಳಂಬ ಮಾಡದೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು. ಘನತ್ಯಾಜ್ಯ ವಿಂಗಡಣಾ ಘಟಕಕ್ಕೆ ಭೇಟಿ ನೀಡಿ ತ್ಯಾಜ್ಯ ವಿಂಗಡಣೆ ನಿರ್ವಹಣೆ ಕ್ರಮಗಳ ಕುರಿತು ಮಾಹಿತಿ ಪಡೆದು ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ತಿಳಿಸಿದರು.
ಕೊಳ್ಳೇಗಾಲ ಪಟ್ಟಣಕ್ಕೆ ಭೇಟಿ ನೀಡಿ ಅಲ್ಲಿನ ಉಪವಿಭಾಗ ಆಸ್ಪತ್ರೆಯ ಎ.ಆರ್.ಟಿ ಕೇಂದ್ರಕ್ಕೆ ತೆರಳಿ ಹೆಚ್.ಐ.ವಿ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಗಳ ದಾಸ್ತಾನು ಪರಿಶೀಲಿಸಿದರು. ಈವರೆಗೆ ಎಷ್ಟು ಮಂದಿ ಸೋಂಕಿತರು ಎ.ಆರ್.ಟಿ. ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಯುವಜನರಲ್ಲಿ ಹೆಚ್.ಐವಿ ಏಡ್ಸ್ ವಿರುದ್ದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಎಲ್.ಇ.ಡಿ ದೃಶ್ಯಾವಳಿಗಳ ಮೂಲಕ ಪರಿಣಾಮಕಾರಿಯಾಗಿ ಹೆಚ್.ಐ.ವಿ ಬಗೆಗಿನ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದರು. ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿ ಅಲ್ಲಿನ ನಿರ್ವಹಣೆಯನ್ನು ವೀಕ್ಷಿಸಿದರು.
ಬಳಿಕ ತಿಮ್ಮರಾಜಿಪುರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ಕೊಟ್ಟು ಅಲ್ಲಿನ ಭೋಜನಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಊಟ ಹಾಕಿಸಿಕೊಂಡು ವಿದ್ಯಾರ್ಥಿಗಳೊಂದಿಗೆ ಸೇವಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ವಸತಿ ಶಾಲೆಯಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಅಧ್ಯಯನಕ್ಕೆ ನಿಮಗೆ ಯಾವುದೇ ತೊಡಕುಗಳಿಲ್ಲ. ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಮತ್ತಷ್ಟು ಪರಿಶ್ರಮದಿಂದ ಸಾಧನೆ ಮಾಡಿ ಮುಂಬರುವ ಫಲಿತಾಂಶದಲ್ಲಿ ಎಲ್ಲರು ಅಗ್ರಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಎಂದು ಸಲಹೆ ಮಾಡಿದರು.
ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಹುದ್ದೆಗಳಲ್ಲಿ ಪ್ರತ್ಯೇಕ ಪ್ರಾತಿನಿಧ್ಯ ಸಿಗಲಿದೆ. ಕ್ರೀಡೆ ಚಟುವಟಿಕೆಗಳಿಂದ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡ ನಿವಾರಣೆಯೂ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಇದೇ ವೇಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿಯವರು ಸನ್ಮಾನಿಸಿದರು.
ತದನಂತರ ಮಂಗಲದ ಏಕಲವ್ಯ ಮಾದರಿ ವಸತಿ ಶಾಲೆಗೆ ಭೇಟಿ ಕೊಟ್ಟು ಅಲ್ಲಿಯು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಾಲೆಯಲ್ಲಿ ಶಿಕ್ಷಣದ ಜೊತೆಗೆ ನೀಡಲಾಗುತ್ತಿರುವ ಕೌಶಲ್ಯ ತರಬೇತಿ ಚಟುವಟಿಕೆಗಳನ್ನು ವೀಕ್ಷಿಸಿದರು.
ತಹಶೀಲ್ದಾರ್ ಗಿರಿಜಾ, ಬಸವರಾಜು, ಚೈತ್ರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಕುಮಾರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್, ಕೊಳ್ಳೇಗಾಲ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಲ್. ಲೋಕೇಶ್ವರಿ, ಸೇರಿದಂತೆ ಇತರೆ ಅಧಿಕಾರಿಗಳು ಭೇಟಿಯ ವೇಳೆ ಇದ್ದರು.
Like this:
Like Loading...
Related