ಚಾಮರಾಜನಗರ: ಅಧಿಕ ಮಳೆಯಿಂದ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ನೀರನ್ನು ಹರಿಸುವುದರಿಂದ ಜಿಲ್ಲೆಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚೆಗೆ ಮಳೆ ಹೆಚ್ಚಾಗಿದೆ. ಮುಂದಿನ ಒಂದು ವಾರದಲ್ಲಿ ಮಳೆ ಅಧಿಕವಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವವಿರುವುದರಿಂದ ಜಿಲ್ಲೆಯ ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಪ್ರವಾಹ ಉಂಟಾಗಲಿದೆ. ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ತಾಲೂಕು ಪಂಚಾಯಿತಿ ಅಧಿಕಾರಿಗಳು ಪ್ರತಿ ವಾರ ಆಯಾ ತಾಲೂಕುಮಟ್ಟದ ವಿಪತ್ತು ನಿರ್ವಹಣಾ ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಪ್ರವಾಹದಿಂದ ರಸ್ತೆಯಲ್ಲಿ ನೀರು ಹರಿದು ಜನ ಜಾನುವಾರುಗಳಿಗೆ ತೊಂದರೆಯಾಗಲಿದೆ. ನೀರು ಸರಾಗವಾಗಿ ಹರಿಯುವಂತೆ ನಾಲೆಗಳಲ್ಲಿ ಹೂಳು ತೆಗೆಸಿ ಆದ್ಯತೆ ಮೇರೆಗೆ ಸ್ವಚ್ಚಗೊಳಿಸಬೇಕು. ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಈ ಸಂಬಂಧ ಜಿಲ್ಲೆಯಲ್ಲಿ 15 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಕಾಳಜಿ ಕೇಂದ್ರದಲ್ಲಿ ನಿರಾಶ್ರಿತ ಜನರಿಗೆ ಅವಶ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಯಾವುದೇ ಜೀವಹಾನಿಯಾಗದಂತೆ ಎಚ್ಚರ ವಹಿಸಬೇಕು. ಕಾಳಜಿಕೇಂದ್ರಕ್ಕೆ ಪ್ರತಿದಿನ ಭೇಟಿ ನೀಡಬೇಕು. ಈ ನಿಟ್ಟಿನಲ್ಲಿ ಆಯಾ ತಹಶೀಲ್ದಾರ್ ಹಾಗೂ ತಾ.ಪಂ. ಅಧಿಕಾರಿಗಳು ಕಳೆದ ಮೂರು ವರ್ಷಗಳ ಮಾಹಿತಿಯನ್ನಾಧರಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಎಷ್ಟು ಪ್ರಮಾಣ ಮಳೆ ಬೀಳುತ್ತಿದೆ, ಜಲಾಶಯಗಳ ನೀರಿನಮಟ್ಟ ಏರಿಕೆ, ಯಾವ ಪ್ರದೇಶ ಮುಳುಗಡೆಯಾಗಲಿವೆ ಎಂಬ ಮಾಹಿತಿಯು ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳಿಗೂ ಅರಿವಿರಬೇಕು. ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಸಭೆ ನಡೆಸಬೇಕು. ಗ್ರಾಮಗಳಲ್ಲಿರುವ ಕೆರೆಗಳಲ್ಲಿನ ಹೂಳು ತೆಗೆಸಬೇಕು. ಅಲ್ಲದೆ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು. ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ತೆರೆಯಲಾಗಿರುವ ಸಹಾಯವಾಣಿ ಕೇಂದ್ರಗಳನ್ನು ಸಕ್ರಿಯಗೊಳಿಸಿ ದಿನದ 24 ಗಂಟೆ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಬರುವ ದೂರು ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.
ಕೊಳ್ಳೇಗಾಲ ತಾಲೂಕಿನ ದಾಸನಪುರ, ಅರಳೆ, ಮುಳ್ಳೂರು, ಯಡಕುರಿಯ, ಧನಗೆರೆ, ಸತ್ತೇಗಾಲ ಸೇರಿದಂತೆ 13 ಗ್ರಾಮಗಳು, ಯಳಂದೂರಿನ ಅಗರ, ಮಾಂಬಳ್ಳಿ, ಮದ್ದೂರು, ಅಂಬಳೆ ಸೇರಿದಂತೆ 6 ಹಾಗೂ ಸುವರ್ಣಾವತಿ ನದಿ ಹರಿಯುವ ಚಾಮರಾಜನಗರ ತಾಲೂಕಿನ ಆಲೂರು, ಚಂದಕವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರವಾಹ ಉಂಟಾಗಬಹುದಾಗಿದೆ. ಆಯಾ ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಗ್ರಾಮಮಟ್ಟದ ವಿಪತ್ತು ನಿರ್ವಹಣಾ ಸಮಿತಿಯನ್ನು ಸಕ್ರಿಯಗೊಳಿಸಬೇಕು. ಈ ಸಂಬಂಧ ಒಂದು ವಾರದೊಳಗೆ ಪೂರ್ವಸಿದ್ದತಾ ಕ್ರಮಗಳನ್ನು ಕೈಗೊಂಡು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಹೆಚ್ಚುವರಿ ನೀರನ್ನು ನದಿಗೆ ಬಿಡುವ ಮೊದಲು ಆಯಾ ಜಲಾಶಯಗಳ ಎಂಜಿನಿಯರ್‍ಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ತಹಶೀಲ್ದಾರರು ಎಂಜಿನಿಯರ್ ಅವರೊಂದಿಗೆ ಸಮನ್ವಯ ಸಾಧಿಸಬೇಕು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿರುವ ಶಿಥಿಲಗೊಂಡಿರುವ ಸೇತುವೆಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಪ್ರವಾಹ ಉಲ್ಭಣಗೊಂಡ ಗ್ರಾಮಗಳಲ್ಲಿ ಅಧಿಕ ನೀರನ್ನು ತೆರವುಗೊಳಿಸಲು ಸಂಬಂಧಪಟ್ಟ ನಗರ, ಸ್ಥಳೀಯ ಸಂಸ್ಥೆಗಳು ತಮ್ಮಲ್ಲಿರುವ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳನ್ನು ದುರಸ್ಥಿಪಡಿಸಿ ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರವಾಹದಿಂದ ಯಾವುದೇ ಹಾನಿ ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ನೇರ ಹೊಣೆಯಾಗಲಿದ್ದಾರೆ ಎಂದು ಹೇಳಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ನೀರಿನ ಗುಣಮಟ್ಟವನ್ನು ಪರೀಕ್ಷೆಗೊಳಪಡಿಸಬೇಕು. ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ನೀರು ಪರೀಕ್ಷಾ ಕೇಂದ್ರಗಳಿದ್ದು, ಅವುಗಳ ಸದ್ಭಳಕೆಯಾಗಬೇಕು. ಕುಡಿಯುವ ನೀರಿನ ಮೂಲಗಳು ಪೈಪ್‍ಲೈನ್ ಸಮಸ್ಯೆಯಿಂದಾಗಿ ಕಲುಷಿತ ನೀರಿನ ಜೊತೆ ಸೇರದಂತೆ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಅಗತ್ಯವಿದ್ದೆಡೆ ಟ್ಯಾಂಕರ್ ಮೂಲಕ ನೀರನ್ನು ಪೂರೈಸಬೇಕು. ಆರ್.ಒ ಪ್ಲಾಂಟ್‍ಗಳನ್ನು ಸುಸ್ಥಿತಿಯಲ್ಲಿಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ತಹಶೀಲ್ದಾರ್ ಬಿ. ಗಿರಿಜ, ಜಿಲ್ಲಾಮಟ್ಟದ ಅಧಿಕಾರಿಗಳು ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related