ವ್ಯಸನಮುಕ್ತ ದಿನಾಚರಣೆಯ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ

ಚಾಮರಾಜನಗರ: ಶ್ರೀ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನದ ಅಂಗವಾಗಿ ನಗರದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ‘ಜಿಲ್ಲಾಮಟ್ಟದ ವ್ಯಸನಮುಕ್ತ ದಿನಾಚರಣೆ’ಯ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಚಾಲನೆ ನೀಡಿದರು.

   ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ “ಜಿಲ್ಲಾಮಟ್ಟದ ವ್ಯಸನ ಮುಕ್ತ ದಿನಾಚರಣೆ” ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿದರು.

   ಇದೇ ವೇಳೆ ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಯುವಜನರು ಇಂದು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡುಬರುತ್ತಿದೆ. ಅದರಲ್ಲೂ ಪ್ರೌಢಶಾಲೆ, ಪಿ.ಯು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಮದ್ಯ, ಮಾದಕ ವಸ್ತುಗಳ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಇದರಿಂದ ಸಾಮಾಜಿಕ ಹಾಗೂ ಕೌಟುಂಬಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಕನಸು ಕಟ್ಟಿಕೊಂಡಿರುವ ತಂದೆ-ತಾಯಿ, ಪೋಷಕರ ಭಾವನೆಗೆ ಧಕ್ಕೆಯಾಗಲಿದೆ ಎಂದರು.

   ಜನನ ಪ್ರಮಾಣಕ್ಕಿಂತ ದುಶ್ಚಟಗಳ ಕಾರಣಗಳಿಂದ ಮರಣ ಪ್ರಮಾಣ ಅಧಿಕವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುರಂತವೇ ಸರಿ. ಕುಟುಂಬ, ಸಾಮಾಜಿಕ ಒಳಿತಿಗಾಗಿ ಯಾರು ಸಹ ಮದ್ಯ, ತಂಬಾಕು, ಮಾದಕ ಪದಾರ್ಥಗಳ ದುಶ್ಚಟಕ್ಕೆ ಒಳಗಾಗಬಾರದು. ಈ ಬಗ್ಗೆ ಎಲ್ಲಾ ಪಂಚಾಯಿತಿಗಳಲ್ಲೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮಸಭೆಗಳಲ್ಲಿಯೂ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಕಾರ್ಮಿಕ ಸೇರಿದಂತೆ ಇತರೆ ಇಲಾಖೆಗಳು ಜಿಲ್ಲಾಡಳಿತದೊಂದಿಗೆ ಶ್ರಮಿಸುತ್ತಿವೆ ಎಂದು ಹೇಳಿದರು.    

  ಜಿಲ್ಲೆಯಾದ್ಯಂತ ಕೋಟ್ಪಾ ಕಾನೂನುನಡಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿ ಶಾಲೆಯ 300 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ 5 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ. ಆದರೂ ಜನರು ಸ್ವಯಂ ಪ್ರೇರಿತರಾಗಿ ಮದ್ಯ, ತಂಬಾಕು, ಮಾದಕ ವಸ್ತುಗಳನ್ನು ತ್ಯಜಿಸಬೇಕು. ಚೆಲುವ ಚಾಮರಾಜನಗರ ಆರೋಗ್ಯವಂತ ಚಾಮರಾಜನಗರವಾಗಿ ಬದಲಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. 

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ತಹಶೀಲ್ದಾರ್ ಗಿರಿಜಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ವಾರ್ತಾ ಸಹಾಯಕರಾದ ಸುರೇಶ್‍ಕುಮಾರ್, ನಗರಸಭೆಯ ಹಿರಿಯ ಆರೋಗ್ಯ ನಿರಿಕ್ಷಕರಾದ ಮಂಜುನಾಥ್, ಇತರರು ಈ ಸಂದರ್ಭದಲ್ಲಿ ಇದ್ದರು.

  ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ಆಯೋಜಿಸಲಾಗಿದ್ದ ಜಾಗೃತಿ ಜಾಥಾದಲ್ಲಿ ನಗರದ ಮನೋನಿಧಿ ನರ್ಸಿಂಗ್ ಹಾಗೂ ಜೆ.ಎಸ್.ಎಸ್. ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು

Leave a Reply

Your email address will not be published. Required fields are marked *