ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ

ಚಾಮರಾಜನಗರ: ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಶ್ಯವಾದ ಮೂಲಸೌಲಭ್ಯಗಳನ್ನು ಒದಗಿಸಿ ಮುಖ್ಯವಾಹಿನಿಗೆ ತರುವ ಸಲುವಾಗಿ ಜಿಲ್ಲೆಯಾದ್ಯಂತ ಸಮೀಕ್ಷೆ ಕಾರ್ಯಕ್ಕೆ ನಗರದಲ್ಲಿಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಸಂಬಂಧ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರೊಂದಿಗೆ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಕುರಿತ ಜಾಗೃತಿ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಯವರು ಅನಾವರಣಗೊಳಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸರ್ಕಾರದ ನಿರ್ದೇಶನದನ್ವಯ ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ರಾಜ್ಯಾದ್ಯಂತ ಬೇಸ್‍ಲೈನ್ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜಿಲ್ಲೆಯಲ್ಲಿಯೂ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಕಾರ್ಯಕ್ರಮವನ್ನು ಇಂದಿನಿಂದ ಆರಂಭಿಸಲಾಗಿದೆ. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯ ಬಗ್ಗೆ ಸಂಪೂರ್ಣ ಅರಿವು ಹೊಂದಿ ಸಮರ್ಪಕ ಮಾಹಿತಿ ಒದಗಿಸಲು ಮುಂದಾಗಬೇಕು ಎಂದರು.

ಸಮೀಕ್ಷೆ ಕಾರ್ಯದಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ, ಶೈಕ್ಷಣಿಕ ಮಟ್ಟ, ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಹಾಗೂ ಸಾಮಾಜಿಕ ಮತ್ತು ಅರ್ಥಿಕ ಸ್ಥಿತಿಗತಿಗಳ ಮಾಹಿತಿಯು ಲಭ್ಯವಾಗಲಿದೆ. ಈ ಸಮೀಕ್ಷೆ ಆಧಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಸಮೀಕ್ಷೆಯಿಂದ ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ವಂಚಿತರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ನೋಡಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣಧಿಕಾರಿ ಡಾ. ರವಿಕುಮಾರ್, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮಹದೇವಪ್ರಸಾದ್, ಸಮತಾ ಸೊಸೈಟಿ ಅಧ್ಯಕ್ಷರಾದ ದೀಪಾ ಬುದ್ದೆ, ಇತರರು ಇದೇ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *