ಚಾಮರಾಜನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಪ್ರಚುರ ಪಡಿಸಲಾಗಿದ್ದು, ಮುಂದಿನ ಪ್ರಕ್ರಿಯೆಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರಡು ಮತದಾರರ ಪಟ್ಟಿಯನ್ನು ಇಂದು ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕುಗಳ ತಹಶೀಲ್ದಾರ್ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ಇಲ್ಲವೇ ಎಂಬುದರ ಬಗ್ಗೆ ಎಲ್ಲಾ ಅರ್ಹ ಮತದಾರರು ಖಚಿತಪಡಿಸಿಕೊಳ್ಳಬೇಕು. ಈ ಸಂಬಂಧ ಹಕ್ಕು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಾವು ನಿಯೋಜಿಸಿರುವ ಬಿ.ಎಲ್.ಎ-2 ರವರ ಮೂಲಕ ವ್ಯಾಪಕ ಪ್ರಚಾರ ನೀಡುವಂತೆ ಕೋರಿದರು.
ಜಿಲ್ಲೆಯಲ್ಲಿ 4,30,786 ಪುರುಷರು, 4,49,390 ಮಹಿಳೆಯರು ಹಾಗೂ 48 ಇತರರು ಸೇರಿದಂತೆ ಒಟ್ಟು 8,80,224 ಮತದಾರಿದ್ದಾರೆ. ಈ ಪೈಕಿ ಮತದಾರರು ಭರ್ತಿ ಮಾಡಿ ನೀಡಿದ ಒಟ್ಟು 7,91,949 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಉಳಿದ 88,275 ಮಂದಿಯನ್ನು ಗೈರಾಗಿರುವ ಮತದಾರರು, ಸ್ಥಳಾಂತರ, ಮರಣ ಹೊಂದಿದವರು, ಎರಡು ಕಡೆ ನೊಂದಣಿಯಾದ ಮತದಾರರು ಹಾಗೂ ಇತರರನ್ನು ಪಟ್ಟಿಯಲ್ಲಿ ಗುರುತಿಸಲಾಗಿದೆ ಎಂದರು.
ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಕೈಬಿಟ್ಟು ಹೋಗಿದ್ದಲ್ಲಿ ಮತದಾರರು ನಮೂನೆ-6ನ್ನು ಘೋಷಣಾ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ನೀಡಿ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ 18 ವರ್ಷ ತುಂಬಿದ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಲು ಫಾರಂ-6 ಅನ್ನು ನೀಡುವ ಕಾರ್ಯ ಮುಂದುವರೆದಿದೆ. ಈ ನಿಟ್ಟಿನಲ್ಲಿ ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವವರೆಗೂ ಪರಿಷ್ಕರಣೆಯ ಮಹತ್ವದ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಮನವಿ ಮಾಡಿದರು.
ಇದೇ ವೇಳೆ ಪ್ರಚುರಪಡಿಸಲಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕರಡು ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಅವರು ವಿತರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಚ್.ಎಸ್. ತೋಂಟಧಾರ್ಯಸ್ವಾಮಿ, ಬಿ.ಎಂ. ಕೃಷ್ಣಮೂರ್ತಿ, ಎಸ್. ಬಾಲಸುಬ್ರಮಣ್ಯ, ಸಯ್ಯದ್ ಅಕ್ರಂ, ಎ.ಎಚ್. ನಸ್ರುಲ್ಲಾ ಖಾನ್, ಭೈರಲಿಂಗಸ್ವಾಮಿ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
Related