ಚಾಮರಾಜನಗರ, ಮಾರ್ಚ್ 17 (ಕರ್ನಾಟಕ ವಾರ್ತೆ):- ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ, ಸೂಚನೆಗಳನ್ನು ನೀಡಿದ್ದು, ಸಾರ್ವಜನಿಕರು ಪಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀರೂಪ ಅವರು ಮನವಿ ಮಾಡಿದ್ದಾರೆ.
ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೆಲ ಕ್ರಮಗಳನ್ನು ಕೈಗೊಳ್ಳಬೇಕು.
ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಕಾಮನ್ ಅಲರ್ಟಿಂಗ್ ಪ್ರೊಟಕಾಲ್ (ಸಿಎಪಿ) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್‍ನಲ್ಲಿ ಗಮನಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ನಡೆಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಾಗಿರುವುದಿಲ್ಲ. ಹೀಗಾಗಿ ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು.
ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರುವಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು.
ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಕೊಳ್ಳಬೇಕು. ವಿದ್ಯುತ್, ಟೆಲಿಪೆÇೀನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಸಿಡಿಲನ್ನು ಆಕರ್ಷಿಸುತ್ತದೆ. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ, ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು. ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು.
ಸಿಡಿಲು ಸಂದರ್ಭದಲ್ಲಿ ಮೊಬೈಲ್ ಪೆÇೀನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಿಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ದರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು.
ಸಿಡಿಲು ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ಬಳಸಬಾರದು. ಪಾತ್ರೆ, ಬಟ್ಟೆ ತೊಳೆಯಬಾರದು. ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು.
ಗುಡುಗು-ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗಬಾರದು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ತೆರಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀರೂಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...
Related