ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಾಕಿ ಇರುವ ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯಕ್ಕೆ ಒಳಗಾದವರು ಸಂಕಷ್ಟದಲ್ಲಿದ್ದು, ಅಂತಹವರಿಗೆ ಯಾವುದೇ ವಿಳಂಬಕ್ಕೆ ಅವಕಾಶವಾಗದಂತೆ ಪರಿಹಾರ ಹಾಗೂ ಸಾಮಾಜಿಕ ನ್ಯಾಯ ತಲುಪಿಸುವ ಕೆಲಸವಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯದ ಜನರ ದೌರ್ಜನ್ಯ ಪ್ರಕರಣಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಾಲಮಿತಿಯಲ್ಲಿ ಪರಿಹರಿಸಬೇಕು. ಕೆಲ ಪ್ರಕರಣಗಳು ಸಾಕಷ್ಟು ವರ್ಷಗಳಿಂದ ಬಾಕಿ ಉಳಿದಿದ್ದು, ಅಂತಹ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಬಾಕಿ ಇರುವ ದೌರ್ಜನ್ಯ ಪ್ರಕರಣಗಳ ಶೀಘ್ರ ಪರಿಹಾರಕ್ಕಾಗಿ ಖಾಯಂ ಸರ್ಕಾರಿ ಅಭಿಯೋಜಕರ ಅವಶ್ಯವಿದೆ. ಪ್ರಸ್ತುತ ಸರ್ಕಾರಿ ಅಭಿಯೋಜಕರು ಪ್ರಭಾರದಲ್ಲಿದ್ದು, ಸಿಬ್ಬಂದಿ ಕೊರತೆಯಿಂದ ದೌರ್ಜನ್ಯ ಪ್ರಕರಣಗಳ ಇತ್ಯರ್ಥದಲ್ಲಿ ವಿಳಂಬವಾಗುತ್ತಿದೆ. ಇದರ ಪರಿಹಾರಕ್ಕಾಗಿ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ಖಾಯಂ ಅಭಿಯೋಜಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಖಾಯಂ ಅಭಿಯೋಜಕರ ನೇಮಕಾತಿಗೆ ಕಾನೂನಿನಲ್ಲಿ ಅವಕಾಶವಿದೆ ಎಂದರು.
ಜಿಲ್ಲೆಯಲ್ಲಿ ಬಾಕಿ ಇರುವ ದೌರ್ಜನ್ಯ ಪ್ರಕರಣಗಳ ತಾಲೂಕುವಾರು ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಬೇಕು. ಪ್ರಕರಣಗಳ ವಿಚಾರಣೆಗಾಗಿ ಸಂತ್ರಸ್ಥರು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಖುದ್ದು ಪರಿಶೀಲಿಸಿ ಸಂತ್ರಸ್ಥರು ಕೋರ್ಟ್‍ಗೆ ಹೊಗಿಬರಲು ವ್ಯವಸ್ಥೆ ಮಾಡಿಕೊಡಬೇಕು. ಪ್ರಕರಣಗಳ ತ್ವರಿತ ಪರಿಹಾರದಿಂದ ನೊಂದವರಿಗೆ ನ್ಯಾಯ ದೊರಕಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಜಿಲ್ಲಾದ್ಯಂತ ಅರಿವು ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಿ ಕಾನೂನಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಿಗೂ ಮಾಹಿತಿ ತಿಳಿಸಬೇಕು. ಸ್ಥಳೀಯವಾಗಿ ಸಮಿತಿ ಸದಸ್ಯರನ್ನು ಒಳಗೊಂಡಂತೆ ಕಾರ್ಯಕ್ರಮಗಳನ್ನು ನಡೆಸಿ ಜನಜಾಗೃತಿ ಮೂಡಿಸಬೇಕು ಎಂದರು.
ಪರಿಶಿಷ್ಟ ಸಮುದಾಯಗಳ ಜನರಿಗೆ ಸ್ಮಶಾನದ ಸಮಸ್ಯೆ ಇರುವ ಕಡೆ ಜಾಗ ಗುರುತಿಸಿ ಮುಂಜೂರು ಮಾಡಲು ಕ್ರಮ ವಹಿಸುವಂತೆ ಆಯಾ ತಾಲೂಕು ತಹಶೀಲ್ದಾರರಿಗೆ ಈಗಾಗಲೇ ಸೂಚಿಸಲಾಗಿದೆ. ಸುಳ್ವಾಡಿ ಸಂತ್ರಸ್ಥರಿಗೆ ನಿವೇಶನ ಮಂಜೂರಾಗಿದ್ದು, ಜೀವನ ಕಟ್ಟಿಕೊಳ್ಳಲು ಭೂಮಿ ನೀಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಲಾಗುವುದು. ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲು ಕೌನ್ಸಲಿಂಗ್ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮುನಿರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ಕೇತಮ್ಮ, ರಮೇಶ್, ರಜನಿ ತಿವಾರಿ, ಅರ್ಪಿತಾ, ಸಿದ್ದರಾಜು, ವೃಷಭೇಂದ್ರಪ್ಪ, ಎಲ್ಲ ತಾಲೂಕುಗಳ ಸಮಾಜ ಕಲ್ಯಾಣಾಧಿಕಾರಿಗಳು, ಸರ್ಕಾರಿ ಅಭಿಯೋಜಕರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.