ಚಾಮರಾಜನಗರ: ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯಕ್ಕಾಗಿ ಅಗತ್ಯವಿರುವ ಎಲ್ಲ ಪೂರ್ವಭಾವಿ ಸಿದ್ದತಾ ಕಾರ್ಯವನ್ನು ಸಮರ್ಪಕವಾಗಿ ಹಾಗೂ ಹೊಣೆಗಾರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದ್ದಾರೆ.
ಪರೀಕ್ಷಾ ಕಾರ್ಯಕ್ಕೆ ಮುಖ್ಯ ಅಧೀಕ್ಷಕರಾಗಿ ನಿಯೋಜನೆಗೊಂಡಿರುವವರು ಪರೀಕ್ಷಾ ಸಂಬಂಧ ಮೂಲ ಸೌಲಭ್ಯಗಳ ಲಭ್ಯತೆಯನ್ನ ಖಾತರಿಪಡಿಸಿಕೊಳ್ಳಬೇಕು. ವೆಬ್ ಕಾಸ್ಟಿಂಗ್ ಗೆ ಬೇಕಿರುವ ತಾಂತ್ರಿಕ ಉಪಕರಣಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿಕೊಳ್ಳಬೇಕು. ಪರೀಕ್ಷಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಪರೀಕ್ಷಾ ಕಾರ್ಯನಿರತ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರ ಸಭೆ ನಡೆಸಿ ಪ್ರತಿಯೊಬ್ಬರ ಕರ್ತವ್ಯ ಹಾಗೂ ಹೊಣೆಗಾರಿಕೆಯನ್ನು ವಿವರಿಸಿ ಮಾರ್ಗದರ್ಶನ ಮಾಡಬೇಕು.
ಮೂಲಭೂತ ಹಾಗೂ ತಾಂತ್ರಿಕ ಸೌಲಭ್ಯಗಳು ಸಮರ್ಪಕ ಹಾಗೂ ಸುಸ್ಥಿತಿಯಲ್ಲಿ ಕಾರ್ಯನಿರ್ವಹಣೆಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಗಳು ಸಮರ್ಪಕವಾಗಿರಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ವಿಚಕ್ಷಣದಳದ ಮೂರು ತಂಡಗಳನ್ನು ರಚಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಮತ್ತು ಸಾಮಾನ್ಯ ಔಷದೋಪಚಾರ ಸಾಮಗ್ರಿಗಳೊಂದಿಗೆ ಶುಶ್ರೂಷಕಿಯರ ನಿಯೋಜನೆ ಮಾಡಬೇಕು. ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿಕೊಂಡು ಪರೀಕ್ಷಾ ಸಂಬಂಧ ಸುಳ್ಳುಸುದ್ದಿ ವದಂತಿ ಹರಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಬೇಕು.
ಪರೀಕ್ಷಾ ಕಾರ್ಯವನ್ನು ಪಾರದರ್ಶಕತೆ ಹಾಗೂ ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಲ್ಲ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಪರೀಕ್ಷಾ ಕರ್ತವ್ಯವನ್ನು ಯಶಸ್ವಿಯಾಗಿ ಮಾಡಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
Like this:
Like Loading...
Related