ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಯೋಗ ಕ್ಷೇಮವನ್ನು ವಿಚಾರಿಸಿ ಪರಿಹಾರಧನ ಮಂಜೂರಾತಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನೆರವಾಗಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅರಕಲವಾಡಿ ನಾಗೇಂದ್ರ, ಸಿದ್ದರಾಜು, ಹೆಚ್.ಬಿ. ವೃಷಬೇಂದ್ರ ಸೇರಿದಂತೆ ಇನ್ನಿತರ ಸದಸ್ಯರು ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರ ಮನೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿ ಪರಿಹಾರ ಮಂಜೂರಾತಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಸಹಾಯ ಮಾಡಬೇಕು. ನ್ಯಾಯಾಲಯ ವಿಚಾರಣೆಗೆ ಹಾಜರಾಗುವ ಬಗ್ಗೆ ಮಾಹಿತಿ ನೀಡಬೇಕು ಎಂದು ಪ್ರಸ್ತಾಪಿಸಿದರು.
ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಪ್ರಕರಣಗಳಲ್ಲಿ ಸಂತ್ರಸ್ತರಾಗಿರುವವರಿಗೆ ನ್ಯಾಯಾಲಯ ವಿಚಾರಣೆಗೆ ಹಾಜರಾಗಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಂಪರ್ಕಿಸಿ ಮಾಹಿತಿ ನೀಡಬೇಕು. ನ್ಯಾಯಾಲಯಕ್ಕೆ ಹಾಜರಾಗುವ ಸಂತ್ರಸ್ತರಿಗೆ ಪ್ರಯಾಣ ಭತ್ಯೆ, ತುಟ್ಟಿ ಭತ್ಯೆ ಮಂಜೂರು ಮಾಡಬೇಕು ಎಂದು ತಿಳಿಸಿದರು.
ಮಸಣಾಪುರ, ಹೊಂಗನೂರು ಗ್ರಾಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಗಳು ಮರುಕಳಿಸಬಾರದು. ಎಲ್ಲಿಯೇ ಆಗಲಿ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಜಾಗೃತಿ ಸಮಿತಿ ಸದಸ್ಯರು ಹೇಳಿದರು.
ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಲಾಗುವ ಶಾಂತಿ ಸಭೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಿಗು ಆಹ್ವಾನ ನೀಡುವಂತೆ ಸದಸ್ಯರು ಸಭೆಯ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ಶ್ರೀರೂಪ ಅವರು ಆಯಾ ಸಂಬಂಧಿಸಿದ ತಾಲೂಕು ಸದಸ್ಯರನ್ನು ಆಹ್ವಾನಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಮಟ್ಟದಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ ಕ್ರಮವಾಗಿ ಅಯೋಜನೆಯಾಗಬೇಕು. ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗಳು ನಿಯಮಾನುಸಾರ ನಿಗದಿತ ಅವಧಿಯೊಳಗೆ ಕರೆಯಲಾಗುತ್ತಿಲ್ಲ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಸಭೆಗಳು ಕಾಲಕಾಲಕ್ಕೆ ನಿಯಮಾನುಸಾರ ಆಯೋಜನೆ ಮಾಡಲು ಉಪವಿಭಾಗಾಧಿಕಾರಿಗಳಿಗೂ ಸೂಚಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆ ಏರ್ಪಾಡು ಮಾಡಿ ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಸೂಚಿಸಿದರು.
ಸದಸ್ಯರಾದ ನಟರಾಜು ಮಾಳಿಗೆ, ಸಿದ್ದರಾಜು, ಅರಕಲವಾಡಿ ನಾಗೇಂದ್ರ, ವೃಷಬೇಂದ್ರ, ಅರ್ಪಿತ ಸೇರಿದಂತೆ ಇನ್ನಿತರ ಸದಸ್ಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜನೆ ಮಾಡಬೇಕು ಎಂದು ಪ್ರಸ್ತಾಪಕ್ಕೆ ಜಿಲ್ಲಾಧಿಕಾರಿಯವರು ಸಮಾಜ ಕಲ್ಯಾಣ ಇಲಾಖೆ ವ್ಯಾಪಕವಾಗಿ ಅರಿವು ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಇಂತಹ ಕಾರ್ಯಕ್ರಮಗಳಿಗೆ ಜಾಗೃತಿ ಸಮಿತಿಯ ಸದಸ್ಯರನ್ನು ಆಹ್ವಾನಿಸುವಂತೆ ನಿರ್ದೇಶನ ನೀಡಿದರು.
ಪರಿಶಿಷ್ಟರು ವಾಸಿಸುವ ಗ್ರಾಮ, ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಇದನ್ನು ತಡೆಯಬೇಕು. ಯುವ ಜನರು ದಾರಿತಪ್ಪದಂತೆ ಮಾರ್ಗದರ್ಶನ ಮಾಡಬೇಕಿದೆ. ಇಲಾಖೆಗಳು ಜೊತೆಗೂಡಿ ಅರಿವು ಕಾರ್ಯಕ್ರಮ ಏರ್ಪಾಡು ಮಾಡಬೇಕು ಎಂದು ಎಲ್ಲ ಸದಸ್ಯರು ಸಭೆಯಲ್ಲಿ ಹೇಳಿದರು. ಸದಸ್ಯರಾದ ಕೇತಮ್ಮ ಅವರು ಬುಡಕಟ್ಟು ಜನಾಂಗ ವಾಸಿಸುವ ಪ್ರದೇಶಗಳಲ್ಲಿಯೂ ಸಹ ಹೆಚ್ಚಿನ ಶಿಬಿರ ಆಯೋಜನೆ ಮಾಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಆದಷ್ಟು ಶೀಘ್ರವೇ ಸಭೆ ಆಯೋಜನೆ ಮಾಡಬೇಕು. ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟವಾಗದಂತೆ ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡಬೇಕು. ಜಾಗೃತಿ ಸಭೆಗಳನ್ನು ಸಹ ಏರ್ಪಾಡು ಮಾಡುವಂತೆ ತಿಳಿಸಿದರು.
ಸದಸ್ಯರಾದ ರಜಿನಿ ಕೆ. ತಿವಾರಿ ಅವರು ಗುಂಡ್ಲುಪೇಟೆ ತಾಲೂಕಿನ ಹುಲ್ಲೇಪುರ ಗ್ರಾಮದಲ್ಲಿ 400 ಎಕರೆ ಪೋಡಾಗದಿರುವ ಹಾಗೂ ವ್ಯವಸಾಯವನ್ನು ಮಾಡಲು ದಾರಿ ಬಿಡಲಾಗುತ್ತಿಲ್ಲ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕ್ರಮವಾಗದಿರುವ ಬಗ್ಗೆ ಪ್ರಸ್ತಾಪಿಸಿದ ವೇಳೆ ಜಿಲ್ಲಾಧಿಕಾರಿಯವರು ಶೀಘ್ರದಲ್ಲಿ ಈ ಸಂಬಂಧ ಕ್ರಮವಹಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸದಸ್ಯರಾದ ಎಂ. ರಮೇಶ್ ಪ್ರಭು ಅವರು ಮಾತನಾಡಿ ಉತ್ತುವಳ್ಳಿ ಕೈಗಾರಿಕಾ ವಲಯದಲ್ಲಿ ಪರಿಶಿಷ್ಟ ವರ್ಗದವರಿಗೆ ಉದ್ದಿಮೆ ಕೈಗಾರಿಕಾ ಶೆಡ್ ಗಳನ್ನು ನೀಡಲಾಗಿದೆ. ಈ ಪ್ರದೇಶದಲ್ಲಿ ವಿದ್ಯುತ್ ದೀಪಗಳು ಒದಗಿಸಬೇಕು ಎಂಬ ವಿಷಯವನ್ನು ಗಮನಕ್ಕೆ ತಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಈ ಸಂಬಂಧ ಪರಿಶೀಲಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.
ದೌರ್ಜನ್ಯ ಪ್ರಕರಣಗಳ ದಾಖಲು, ಸಂತ್ರಸ್ತರಿಗೆ ಮಂಜೂರು ಮಾಡಿರುವ ಪರಿಹಾರಧನ ಇನ್ನಿತರ ಮಾಹಿತಿಯನ್ನು ಸಭೆಯಲ್ಲಿ ವಿವರಿಸಲಾಯಿತು. ಜೀತ ವಿಮುಕ್ತರಿಗೆ ಭೂಮಿ, ಇ-ಸ್ವತ್ತು, ಸುಳ್ವಾಡಿ ಸಂತ್ರಸ್ತರಿಗೆ ಭೂಮಿ ಒದಗಿಸುವುದು ಸೇರಿದಂತೆ ಪರಿಶಿಷ್ಟರಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಡಿವೈಎಸ್‍ಪಿ ಸ್ನೇಹರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related