ಕುಡಿಯುವ ನೀರಿನ ಸಮಸ್ಯೆ ಶೀಘ್ರ ಪರಿಹರಿಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ: ಜಿಲ್ಲೆಯ ಯಾವುದೇ ಭಾಗದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆಗಳ ಮೂಲಕ ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

   ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ಮುಂಬರುವ ಮೇ ತಿಂಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 15ರಿಂದ 30 ದಿನಗಳವರೆಗೆ ಜನ, ಜಾನುವಾರುಗಳಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಬೇಕಿದೆ. ಬೋರ್‍ವೆಲ್, ಖಾಸಗಿ ಬೋರ್‍ವೆಲ್, ಟ್ಯಾಂಕರ್, ತೆರೆದ ಬಾವಿ, ಕೈಪಂಪ್ ಸೇರಿದಂತೆ ಇತರೆ ಪರ್ಯಾಯ ವ್ಯವಸ್ಥೆಗಳ ಮೂಲಕ ಕುಡಿಯುವ ನೀರು ಪೂರೈಸಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, 24*7 ಅವಧಿಯಲ್ಲಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

   ಪ್ರತಿ ವಾರ ಹಾಗೂ 15 ದಿನಗಳಿಗೊಮ್ಮೆ ಕುಡಿಯುವ ನೀರಿನ ಲಭ್ಯತೆ, ಪೂರೈಕೆ ಕುರಿತು ತಾಲೂಕುಮಟ್ಟದ ಟಾಸ್ಕ್‍ಪೋರ್ಸ್ ಸಭೆ ನಡೆಸಿ ಆಯಾ ಭಾಗದ ಸಮಸ್ಯೆಗಳನ್ನು ಅರಿಯಬೇಕು. ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಜನರ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವ ಕೆಲಸವಾಗಬೇಕು. ಶುದ್ಧ ಕುಡಿಯುವ ನೀರಿನ ಘಟಕ (ಆರ್.ಒ ಪ್ಲಾಂಟ್)ಗಳನ್ನು ಸುವ್ಯವಸ್ಥೆಯಲ್ಲಿಟ್ಟುಕೊಳ್ಳಬೇಕು. ಎಲ್ಲಾ ಗ್ರಾಮಗಳಲ್ಲಿ ಜಾನುವಾರುಗಳಿಗಾಗಿ ಕುಡಿಯುವ ನೀರಿನ ತೊಟ್ಟಿಗಳನ್ನು ಸ್ವಚ್ಚಗೊಳಿಸಿ ಪ್ರತಿನಿತ್ಯ ನೀರು ತುಂಬಿಸುವ ವ್ಯವಸ್ಥೆಯಾಗಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜನರ ದೂರುಗಳಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ನಿರ್ದೇಶನ ನೀಡಿದರು.

   ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮುಂಬರುವ ದಿನಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಮಸ್ಯಾತ್ಮಕ ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ 25 ಗ್ರಾಮಪಂಚಾಯಿತಿಗಳ 41 ಗ್ರಾಮಗಳಲ್ಲಿ, ಗುಂಡ್ಲುಪೇಟೆಯ 7 ಗ್ರಾಮಪಂಚಾಯಿತಿಯ 7 ಗ್ರಾಮಗಳಲ್ಲಿ, ಯಳಂದೂರಿನ 8 ಗ್ರಾಮ ಪಂಚಾಯಿತಿಗಳ 10 ಗ್ರಾಮಗಳಲ್ಲಿ, ಕೊಳ್ಳೇಗಾಲ 5 ಗ್ರಾಮ ಪಂಚಾಯಿತಿಗಳ 11 ಗ್ರಾಮಗಳಲ್ಲಿ ಹಾಗೂ ಹನೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ 60 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ಎಲ್ಲಾ ಗ್ರಾಮಗಳಲ್ಲಿ ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಂತದಲ್ಲಿಯೇ ಸಮಸ್ಯೆ ಪರಿಹರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

   ನೀರಿನ ಲಭ್ಯತೆ ಪರಿಶೀಲಿಸಿ ಅಗತ್ಯವಿರುವೆಡೆ ಹೊಸದಾಗಿ ಬೋರ್‍ವೆಲ್ ಕೊರೆಸಬೇಕು ಅಥವಾ ರೀಡ್ರಿಲ್, ರೀ ಬೋರ್ ಮಾಡಿಸಬೇಕು. ಖಾಸಗಿ ಬೋರ್‍ವೆಲ್ ಬಳಸಿಕೊಳ್ಳಬೇಕು. ಅವಶ್ಯವಿದ್ದರೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರಿನ ಪೈಪ್‍ಲೈನ್‍ಗೆ ಚರಂಡಿ ನೀರು ಸೇರದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ಶುದ್ಧತೆಯ ಕುರಿತು ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಗ್ರಾಮವಾರು ಸಮಸ್ಯೆಗಳನ್ನು ಪಟ್ಟಿಮಾಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

   ಜಿಲ್ಲೆಯಾದ್ಯಂತ ಜಲಜೀವನ್ ಮಿಷನ್ ಕಾಮಗಾರಿ ಇನ್ನೂ ಬಾಕಿ ಇರುವುದು ಕಂಡುಬಂದಿದೆ. ಕೆಲವೆಡೆ ಪೈಪ್‍ಲೈನ್ ಅಳವಡಿಸುವ ಕಾಮಗಾರಿ ಅಪೂರ್ಣವಾಗಿರುವುದನ್ನು ಗಮನಿಸಲಾಗಿದೆ. ಕಾಮಗಾರಿ ಪೂರ್ಣಗೊಳಿಸದಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪ್ರಸ್ತುತ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಜನರಿಗೆ ತೊಂದರೆ ನೀಡಬಾರದೆಂದು ಚೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. 

   ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎಲ್ಲಾ ತಾಲೂಕುಗಳಲ್ಲಿ ಕಡ್ಡಾಯವಾಗಿ ಟಾಸ್ಕ್‍ಪೋರ್ಸ್ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣವಾಗಬೇಕು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ರೂಪುರೇಷೆಗಳನ್ನು ಸಿದ್ದಪಡಿಸಬೇಕು. ಅಗತ್ಯವಿರುವಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು. ಪಂಚಾಯಿತಿಗಳಲ್ಲಿ ತೆರೆಗೆ ಸಂಗ್ರಹ ಕಾರ್ಯ ಚುರುಕುಗೊಳಿಸಬೇಕು ಎಂದು ತಿಳಿಸಿದರು.

  ಇದೇ ವೇಳೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಶಲುಬಾಯಿ ರೋಗದ ಲಸಿಕಾ ಅಭಿಯಾನದ ಜಾಗ್ರತಿ ಪೋಸ್ಟರ್‍ಗಳನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

  ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *