ಭಾರತ್ ಜೋಡೊ ಯುವ ಸಂಘ ಯೋಜನೆಯ ಅನುಷ್ಠಾನಕ್ಕೆ ಕಾರ್ಯೋನ್ಮುಖರಾಗಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ: ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ,  ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯ ಉತ್ತೇಜಿಸಲು ಗ್ರಾಮ ಪಂಚಾಯತ್ ಹಾಗೂ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸುವ ಸರ್ಕಾರದ ಮಹತ್ವದ ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಕಾರ್ಯ ಪ್ರಾವೃತ್ತರಾಗಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು. 

  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

  ಸಮುದಾಯ ಅಭಿವೃದ್ದಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್ನೆಸ್ ಮತ್ತು ಕೌಶಲ್ಯಾಭಿವೃದ್ದಿಯ ಮೂಲಕ ಯುವಜನರನ್ನು ಸಬಲೀಕರಣಗೊಳಿಸಿ ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಲು ಪ್ರತಿ ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್‍ಗಳಲ್ಲಿ ಸಶಕ್ತ ಯುವಜನತೆಯನ್ನು ಒಳಗೊಂಡ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ತರ ಯೋಜನೆ ಜಾರಿಗೊಳಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 

  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ದಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಯೋಜನೆ ಅನುಷ್ಠಾನ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಸಂಘ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ಪುರಸಭೆ ವ್ಯಾಪ್ತಿಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತಿ ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಬೇಕಿದೆ ಎಂದರು. 

  ಪ್ರತಿ ಘಟಕ ಸ್ಥಾಪಿಸಲು ಬಿಜೆವೈಎಸ್ (ಃಎಙS) ಪೋರ್ಟಲ್ ಅಥವಾ ಮೊಬೈಲ್ ಆಫ್ ಮೂಲಕ ಅಥವಾ ಗ್ರಾಮ ಪಂಚಾಯಿತಿ, ನಗರ ಪ್ರದೇಶಗಳಲ್ಲಿನ ಗ್ರಾಮ ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳ ಸಹಾಯದಿಂದ ಅರ್ಜಿ ಸಲ್ಲಿಸಬೇಕಿದೆ. ಪ್ರತಿಯೊಬ್ಬ ಸದಸ್ಯರ ನೋಂದಣಿಗೆ ಆಧಾರ್ ಕಡ್ಡಾಯವಾಗಿದ್ದು, ಸದಸ್ಯರು 16 ರಿಂದ 35 ವರ್ಷದವರಾಗಿರಬೇಕು. ಘಟಕ ರಚನೆಗೆ ಕನಿಷ್ಠ 100 ಸದಸ್ಯರಿರಬೇಕು ಎಂದು ಹೇಳಿದರು. 

  ಪ್ರತಿ ಭಾರತ್ ಜೋಡೊ ಯುವ ಸಂಘಕ್ಕೆ ವಾರ್ಷಿಕವಾಗಿ ತಲಾ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಲಿದೆ. ಯುವ ಸಂಘಕ್ಕಾಗಿ ಕೊಠಡಿ ಒದಗಿಸುವುದು, ಹೊರಾಂಗಣ ಚಟುವಟಿಕೆಗಳಿಗೆ ಸ್ಥಳಾವಕಾಶ, ಅನುಮತಿಯಂತಹ ಅಗತ್ಯತೆಗಳಿಗೆ ಕ್ರಮ ವಹಿಸಬೇಕು. ಯೋಜನೆಯ ಪಾರದರ್ಶಕ ಮತ್ತು ಸಮರ್ಥ ಅನುಷ್ಠಾನಕ್ಕಾಗಿ ನಿಗದಿಪಡಿಸಲಾಗಿರುವ ಆಡಳಿತಾತ್ಮಕ ಹಂತಗಳ ಅನ್ವಯ ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 

   ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಯ ಅಧಿಕಾರಿಗಳು ತಮ್ಮ ಹಂತದಲ್ಲಿ ಕೂಡಲೇ ಸಭೆ ಕರೆದು ನೊಂದಣಿಗೆ ಸಿದ್ದತೆ ಕೈಗೊಳ್ಳಬೇಕು. ಯೋಜನೆಯ ಬಗ್ಗೆ ವ್ಯಾಪಕವಾಗಿ ತಿಳಿಸಿ ತ್ವರಿತವಾಗಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಗೆ ಸರ್ಕಾರದ ಆದೇಶ ಮಾರ್ಗಸೂಚಿಗಳ ಅನ್ವಯ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ನಿರ್ದೇಶನ ನೀಡಿದರು. 

   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಹೆಚ್.ಎಸ್. ಬಿಂದ್ಯಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರದ ವೆಂಕಟೇಶ್, ತಹಶೀಲ್ದಾರರಾದ ಗಿರಿಜಾ, ಬಸವರಾಜು, ನಯನ, ಚೈತ್ರ, ಜಯಪ್ರಕಾಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟಿಲ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ಇನ್ನಿತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *