ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಘನತ್ಯಾಜ್ಯ ನಿರ್ವಹಣೆಯ ಯಂತ್ರೋಪಕರಣಗಳಿಗೆ ಚಾಲನೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು.


ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ.

ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು. 

ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.

Leave a Reply

Your email address will not be published. Required fields are marked *