ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ನೂತನ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಂಭವವಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನರಿಂದ ಯಾವುದೇ ದೂರುಗಳು ಬಾರದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕ್ಷೇತ್ರಪ್ರವಾಸ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು. ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಅರಿಯಬೇಕು. ಪೈಪ್‍ಲೈನ್ ಕಾಮಗಾರಿಗಳು ಬಾಕಿ ಉಳಿದಿದ್ದರೆ ಅದಷ್ಟು ಬೇಗ ಮುಗಿಸಬೇಕು. ಬೋರ್‍ವೆಲ್‍ಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದರೆ ರೀಬೋರ್ ಮಾಡಿಸಬೇಕು. ಅವಶ್ಯವಿದ್ದರೆ ಟ್ಯಾಂಕರ್‍ಗಳಲ್ಲಿ ನೀರನ್ನು ನಿರಂತರವಾಗಿ ಪೂರೈಸಬೇಕು. ಇದಕ್ಕಾಗಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕ್ರೀಯಾಶೀಲ ಅಧಿಕಾರಿಗಳನ್ನು ಉಸ್ತುವಾರಿಯಾಗಿ ನೇಮಿಸಬೇಕು ಎಂದರು.
ಹನೂರು ತಾಲೂಕಿನ ಸಾಕಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿರುವ ಬಗ್ಗೆ ಆಯಾ ಸ್ಥಳದ ಜಿ.ಪಿ.ಎಸ್ ಛಾಯಾಚಿತ್ರ, ವಿಡಿಯೋಗಳನ್ನು ಸಂಗ್ರಹಿಸಿ ವರದಿ ಸಲ್ಲಿಸಬೇಕು. ಮುಂದಿನ ವಾರದಲ್ಲಿ ಸಮಸ್ಯೆ ಇರುವ ಗ್ರಾಮಗಳಿಗೆ ಭೇಟಿ ನೀಡಿ ಜನರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮವಿದೆ. ಕುಡಿಯುವ ನೀರಿನ ಸಂಬಂಧ ಸಾರ್ವಜನಿಕರ ದೂರುಗಳಿಗೆ ಅಧಿಕಾರಿಗಳು ಯಾವುದೇ ಸಬೂಬು ಹೇಳಿದರೆ ಸಹಿಸುವುದಿಲ್ಲ. ಕುಡಿಯುವ ನೀರಿನ ಸಮಗ್ರ ವರದಿ ತಯಾರಿಸಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸಚಿವರಾದ ಕೆ. ವೆಂಕಟೇಶ್ ಅವರು ನಿರ್ದೇಶನ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿದರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ತೆ ಎದುರಾಗುವುದಿಲ್ಲ. ಜೆ.ಜೆ.ಎಂ. ಪೈಪ್ ಲೈನ್ ಕಾಮಗಾರಿಗಾಗಿ ಪ್ರತಿವರ್ಷ 5 ಕೋಟಿ ರೂ. ಅನುದಾನ ನೀಡುತ್ತಿದ್ದರೂ ಕಾಮಗಾರಿ ನಿರೀಕ್ಷಿತ ಪ್ರಮಾಣದಲ್ಲಿ ಅನುಷ್ಠಾನಗೊಂಡಿಲ್ಲ. ಪೈಪ್‍ಲೈನ್ ಸೋರುವಿಕೆ ತಡೆಗಟ್ಟಲು ಸಾಕಷ್ಟು ಅನುದಾನ ಖರ್ಚಾಗುತ್ತಿದೆ. ಕೆಲವೆಡೆ ಪೈಪ್ ಲೈನ್ ಕಾಮಗಾರಿ ಅಪೂರ್ಣವಾಗಿದೆ. ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಮೊದಲ ಅದ್ಯತೆ ನೀಡಬೇಕು ಎಂದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮದಡಿ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಪೈಪ್‍ಲೈನ್ ಮೂಲಕ ನೀರು ಹರಿಸಬೇಕು. ಕಾಲುವೆ ಮೂಲಕ ನೀರು ಮತ್ತೊಂದು ಕೆರೆ ತಲುಪಲು 15ರಿಂದ 20 ದಿನ ಸಮಯ ಹಿಡಿದು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ತುರ್ತಾಗಿ ಗಮನ ಹರಿಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಶಾಸಕರಾದ ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಸರ್ಕಾರಿ ಶಾಲೆಗಳಿಗೆ ಸರ್ಕಾರ ಎಲ್ಲಾ ಅವಶ್ಯ ಸೌಲಭ್ಯಗಳನ್ನು ನೀಡುತ್ತಿದ್ದರೂ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ಫಲಿತಾಂಶ ಉತ್ತಮವಾಗಿದೆ. ಇದಕ್ಕೆ ಕಾರಣಗಳನ್ನು ಹುಡುಕಿ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು. ಈ ಬಾರಿ ಸರ್ಕಾರಿ ಶಾಲೆಗಳಿಗೆ ಪರಿಶಿಷ್ಟ ಜಾತಿ, ವರ್ಗಗಳು ಹಾಗೂ ಅಲ್ಪಸಂಖ್ಯಾತ ಮಕ್ಕಳ ದಾಖಲಾತಿ ಹೆಚ್ಚಾಗುವಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಹನೂರು ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಈ ಬಾರಿ ತಾಲೂಕಿನ ಕೆಂಪಯ್ಯನಹಟ್ಟಿ ಸರ್ಕಾರಿ ಶಾಲೆಯಲ್ಲಿ ಎರಡು ವಿಷಯಗಳಿಗೆ ಶಿಕ್ಷಕರ ಕೊರತೆ ಇದ್ದರೂ ಆನ್‍ಲೈನ್ ಮೂಲಕ ಮಾಹಿತಿ ಅರಿತು ವಿದ್ಯಾರ್ಥಿಯೊಬ್ಬ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 618 ಅಂಕಗಳಿಸಿದ್ದಾನೆ. ಸದರಿ ಶಾಲೆಯ ಶಿಕ್ಷಕರ ಕೊರತೆ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಇನ್ನುಳಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೃಷಿ, ತೋಟಗಾರಿಕೆ, ರೇಷ್ಮೆ, ಮಹಿಲಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಸಂಗೋಪನೆ, ಅಬಕಾರಿ, ಸಾರಿಗೆ, ಗಣಿ, ಗ್ರಂಥಾಲಯ, ಕಾರ್ಮಿಕ ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು.
ಇದೇ ವೇಳೆ ಈ ಬಾರಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಜನಗಣತಿ ಕಾರ್ಯ ಪೂರ್ಣಗೊಳಿಸಿದ ಅಧಿಕಾರಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಗುಂಡ್ಲುಪೇಟೆ ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ವಿ.ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಅಧಿಕಾರೇತರ ಸದಸ್ಯರಾದ ಸಯ್ಯದ್ ಮುಸಾಯಿಲ್, ಶಂಕರಪ್ಪ, ಭವ್ಯಾ ಮುನಿರಾಜು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.