ಚಾಮರಾಜನಗರ: ನಗರದ ಯಡಬೆಟ್ಟದ ಸಮೀಪ ಬುಡಕಟ್ಟು ಆದಿವಾಸಿ ಸಮುದಾಯದ ಅನುಕೂಲಕ್ಕಾಗಿ 3.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಸಮುದಾಯ ಭವನದ ಕಾಮಗಾರಿಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಬುಡಕಟ್ಟು ಆದಿವಾಸಿ ಸಮುದಾಯದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಈ ಭವನವು ಸಮುದಾಯದ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆ-ಸಮಾರಂಭಗಳನ್ನು ಆಯೋಜಿಸಲು ಸಹಕಾರಿಯಾಗಲಿದೆ. ಸಮುದಾಯ ಭವನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಮುದಾಯ ಭವನದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟವನ್ನು ಕಾಯ್ದುಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೇತಮ್ಮ, ಮುಖಂಡರಾದ ಜಡೆಯಪ್ಪ, ಡಾ. ಸಿ. ಮಾದೇಗೌಡ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುಬ್ಬರಾಯ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಕಚೇರಿ ಅಧೀಕ್ಷಕರಾದ ಶ್ರೀನಿವಾಸಮೂರ್ತಿ, ತಾಲೂಕು ಕಚೇರಿಯ ವ್ಯವಸ್ಥಾಪಕರಾದ ಸುರೇಶ್, ಮನೋಹರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Related