ಚಾಮರಾಜನಗರ, ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ):- ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲಾ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರುವಂತೆ ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿವರ್ಷದಂತೆ ಈ ಬಾರಿಯೂ ಜಿಲ್ಲೆಯಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ. ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದವರು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಜಿಲ್ಲೆಯ ಐದು ತಾಲೂಕುಗಳಲ್ಲಿಯೂ ದಸರಾ ಕ್ರೀಡಾಕೂಟ ಯಶಸ್ವಿಯಾಗಿ ನಡೆದಿದೆ. ಜಿಲ್ಲಾಮಟ್ಟದಲ್ಲಿ ವಿಜೇತರು ಮುಂದಿನ ಹಂತದಲ್ಲಿ ನಡೆಯುವ ವಿಭಾಗ ಹಾಗೂ ರಾಜ್ಯಮಟ್ಟದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಹಿಂದಿನ ದಿನಗಳಲ್ಲಿ ತಾವು ಸಹ ಕಬಡ್ಡಿ ಕ್ರೀಡಾಪಟುವಾಗಿದ್ದ ವಿಚಾರ ಹಂಚಿಕೊಂಡ ಸಚಿವರು ಕ್ರೀಡೆಯಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯವಾಗಿದೆ. ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಪ್ರಮುಖವಾಗಿದೆ. ಗೆದ್ದವರು ಹಿಗ್ಗದೆ ಸೋತವರು ಕುಗ್ಗದೇ ಕ್ರೀಡಾ ಮನೋಭಾವ ಪ್ರದರ್ಶಿಸಬೇಕು. ಕ್ರೀಡಾಕೂಟದಲ್ಲಿ ನೈಜ ಪ್ರತಿಭೆಗಳು ಹೊರಹೊಮ್ಮಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಆರ್. ಗಿರೀಶ್, ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.