ಬರ ಹಿನ್ನೆಲೆ : ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯ ಸೂಚನೆ

ಚಾಮರಾಜನಗರ: ಜಿಲ್ಲೆಯು ತೀವ್ರ ಬರಪೀಡಿತವೆಂದು ಘೋಷಣೆಯಾಗಿದ್ದು, ಪ್ರಸ್ತುತ ಸಂದರ್ಭದಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿದೆ. ಹೀಗಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತ ಅಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಯಳಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿಂದು ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಐದು ತಾಲೂಕುಗಳನ್ನು ತೀವ್ರ ಬರಪೀಡಿತವೆಂದು ಸರ್ಕಾರ ಘೋಷಣೆ ಮಾಡಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ. ಈಗಾಗಲೇ ಕೈಗೆತ್ತಿ ಕೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ವಿಳಂಬ ಮಾಡದೇ ಪೂರ್ಣಗೊಳಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.

ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿರುವ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆದಿದ್ದು, ನೀರು ಲಭ್ಯತೆ ಇದ್ದರೆ ಅಂತಹ ಕಡೆ ಪಂಪು ಮೋಟಾರುಗಳ ಅಳವಡಿಕೆಯನ್ನು ಕೂಡಲೇ ಮಾಡಬೇಕು. ಶಾಶ್ವತ ಕುಡಿಯುವ ನೀರಿನ ಯೋಜನೆಯ ಬಾಕಿ ಕೆಲಸಗಳನ್ನು ಉಳಿಸಿಕೊಳ್ಳದೇ ತಕ್ಷಣವೇ ಪೂರೈಸಬೇಕು. ಬರ ಪರಿಸ್ಥಿತಿಯ ಈ ಸಂದರ್ಭದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆ ಬಾರದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಎಲ್ಲ ಹಂತದ ಅವಶ್ಯಕತೆಗಳನ್ನು ಒಳಗೊಂಡ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಬೇಕು. ಈಗಾಗಲೇ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಕಾಮಗಾರಿ ಕೈಗೊಳ್ಳಬೇಕು. ಪ್ರಸ್ತುತ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸೌಲಭ್ಯವನ್ನು ವೇಗವಾಗಿ ಕಲ್ಪಿಸಬೇಕು. ಹೀಗಾಗಿ ಯಾವುದೇ ನಿರ್ಲಕ್ಷ್ಯ ವಹಿಸದೇ ಅತ್ಯಂತ ಚುರುಕಾಗಿ ಬರ ಪರಿಹಾರ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ತಾಕೀತು ಮಾಡಿದರು.

ಜಾನುವಾರುಗಳ ಮೇವು ಲಭ್ಯತೆ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಪಶುಪಾಲನಾ ಇಲಾಖೆ ಅಧಿಕಾರಿಗಳು ಪ್ರಸ್ತುತ ಲಭ್ಯತೆ ಇರುವ ಮೇವಿನ ಕುರಿತು ವಿವರಿಸಿದರು. ಜಿಲ್ಲೆಯ 39 ಸ್ಥಳಗಳಲ್ಲಿ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮುಂದುವರೆದು ಮಾತನಾಡಿ ಬರಗಾಲದಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಬೇಕು. ವಿಬಿ ಜಿ ರಾಮ್ ಜಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಉದ್ಯೋಗ ಒದಗಿಸುವ ಮೂಲಕ ಆರ್ಥಿಕ ಭದ್ರತೆ ನೀಡಬೇಕು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆಯಡಿ ಕಾಮಗಾರಿಗಳನ್ನು ಕೈಗೊಂಡು ಗ್ರಾಮೀಣ ಭಾಗದ ಜನರಿಗೆ ನೆರವಾಗಬೇಕು ಎಂದು ತಿಳಿಸಿದರು.

ಕೃಷಿ ಹಾಗೂ ತೋಟಗಾರಿಕೆ ಸಂಬಂಧ ಜಿಲ್ಲೆಯಲ್ಲಿ ಇದುವರೆಗೆ ಅಗಿರುವ ಬಿತ್ತನೆ, ಬೆಳೆ ನಷ್ಟ, ಬೆಳೆ ವಿಮೆ ನೋಂದಣಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕಿನ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ವಹಿಸಲಾಗುತ್ತಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು. ಇನ್ನಿತರ ಇಲಾಖೆಗಳ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಆರ್. ವಿನೋತ್ ಪ್ರಿಯ ಅವರು ಪರಾಮರ್ಶಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಯಳಂದೂರು ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ದೀಪಾ, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಂiÀiಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *