ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಜಿಲ್ಲೆಯಲ್ಲಿ ಬೆಳೆದಿರುವ ಹಾಗೂ ಹಾಲಿ ಲಭ್ಯವಿರುವ ಮೇವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಆದೇಶಿಸಿದ್ದಾರೆ.
ಜಿಲ್ಲೆಯ ಗಡಿಭಾಗದಲ್ಲಿರುವ ಪೊಲೀಸ್ ಠಾಣೆಗಳ ಅಧಿಕಾರಿಗಳು,ಅರಣ್ಯ ಇಲಾಖಾ ವ್ಯಾಪ್ತಿಯ ಚೆಕ್ ಪೋಸ್ಟ್ ಅಧಿಕಾರಿಗಳು ಈ ಕುರಿತು ಅತ್ಯಂತ ಜಾಗರೂಕರಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಿಂದ ಹೊರ ಜಿಲ್ಲೆ ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ನಿಯಮಾನುಸಾರ ಕಾನೂನು ರೀತ್ಯಾ ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅನ್ವಯ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀರೂಪ ಅವರು ಆದೇಶದಲ್ಲಿ ತಿಳಿಸಿದ್ದಾರೆ.
