ಚಾಮರಾಜನಗರ: ವಿದ್ಯಾರ್ಥಿಗಳು ಒತ್ತಡ ಮುಕ್ತ ಹಾಗೂ ಆತ್ಮವಿಶ್ವಾಸದಿಂದ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದು ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನಗಳಿಸಲು ಶಿಕ್ಷಕರು ಉತ್ತೇಜಿಸಬೇಕೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿಂದು ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಹಾಗೂ 2022-23, 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ ಪ್ರೌಢಶಾಲಾ ಮುಖ್ಯೋಪಾಧ್ಯಯರಿಗೆ ಅಭಿನಂದನಾ ಫಲಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿದ್ದು, ಉಳಿದಿರುವ ಶೈಕ್ಷಣಿಕ ಅವಧಿಯಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಬಗ್ಗೆ ವಿಶೇಷವಾಗಿ ಕೇಂದ್ರೀಕರಿಸಬೇಕು. ಮಕ್ಕಳಿಗೆ ಪರೀಕ್ಷೆ ಬಗೆಗಿನ ಭಯ ಇರಬಾರದು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಮನೋಭಾವನೆ ಉಂಟು ಮಾಡಬೇಕು. ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಪರೀಕ್ಷೆ ಬರೆಯಲು ಸಜ್ಜುಗೊಳಿಸಬೇಕು ಎಂದರು.
ಇತ್ತೀಚೆಗೆ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದೆ ಇದ್ದಾರೆ ಎಂಬ ಬಗ್ಗೆ ಪರಿಶೀಲಿಸಿ ಅಂತಹ ವಿಷಯಗಳಿಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಕ್ಲಿಷ್ಟಕರ ಎನಿಸಬಹುದಾದ ವಿಷಯಗಳನ್ನು ಸರಳವಾಗಿ ಮನಮುಟ್ಟುವಂತೆ ಹೇಳಿಕೊಡಬೇಕು. ಇತರೆ ವಿದ್ಯಾರ್ಥಿಗಳಂತೆ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಲು ಶಿಕ್ಷಕರು ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಎಸ್.ಎಸ್.ಎಲ್.ಸಿ ಹಂತವು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಕಮರಿ ಹೋಗದಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕಿದೆ. ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ನೋಡಿಕೊಳ್ಳÀಬೇಕಿದೆ. ಎಸ್.ಎಸ್.ಎಲ್.ಸಿ ಯಲ್ಲಿ ಜಿಲ್ಲೆ ಮೇಲಿನ ಕ್ರಮಾಂಕದಲ್ಲಿ ಉನ್ನತ ಸ್ಥಾನಗಳಿಸಬೇಕು. ಉತ್ತಮ ಫಲಿತಾಂಶ ಪಡೆದು ಜಿಲ್ಲೆಗೆ ಹಿರಿಮೆ ತರಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಪರೀಕ್ಷೆಗೆ ಉಳಿದಿರುವ ಬಾಕಿ ದಿನಗಳಲ್ಲಿ ಫಲಿತಾಂಶದಲ್ಲಿ ಕಡಿಮೆ ಸಾಧನೆ ಮಾಡಿರುವ ಕೆಲ ಶಾಲೆಗಳು ವಿದ್ಯಾರ್ಥಿಗಳಿಗೆ ಹಳೆಯ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಮಾಡಿಸಬೇಕು. ಗೈರು ಹಾಜರಿಯಿಂದ ಹೆಚ್ಚು ಅಂಕ ಪಡೆಯಲು ಸಾಧ್ಯವಾಗದೆ ಇರುವ ಮಕ್ಕಳಿಗೆ ಸರಳವಾಗಿ ವಿಷಯಗಳನ್ನು ಮನದಟ್ಟು ಮಾಡಿಕೊಡಬೇಕು. ಪೋಷಕರೊಂದಿಗೆ ಸಂಪರ್ಕದಲ್ಲಿದ್ದು ಮಕ್ಕಳ ಕಲಿಕೆಗೆ ಉತ್ತೇಜಿಸಬೇಕು. ಫಲಿತಾಂಶದಲ್ಲಿ ಜಿಲ್ಲೆ ಗಮನಾರ್ಹ ಸಾಧನೆ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್. ಚಂದ್ರಪಾಟಿಲ್ ಅವರು ಮಾತನಾಡಿ ಎಸ್.ಎಸ್.ಎಲ್.ಸಿ 2ನೇ ಪೂರ್ವಭಾವಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ಐದನೇ ಸ್ಥಾನದಲ್ಲಿದೆ. ಮುಖ್ಯ ಪರೀಕ್ಷೆಯಲ್ಲಿ ಇದಕ್ಕಿಂತಲೂ ಮೇಲಿನ ಸ್ಥಾನ ಪಡೆಯಬೇಕು. ಈಗಾಗಲೇ 4 ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚು ಅಭ್ಯಾಸ ಮಾಡಿಸಬೇಕಿದೆ. ಪರೀಕ್ಷೆಗೆ ಇನ್ನುದಿಳಿದಿರುವ ದಿನಗಳಲ್ಲಿ ಶಿಕ್ಷಕರು ಹೆಚ್ಚು ಪರಿಶ್ರಮದಿಂದ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದು ತಿಳಿಸಿದರು.
ಇದೇ ವೇಳೆ 2022-23 ಮತ್ತು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದ 83 ಶಾಲೆಯ ಪ್ರೌಢಶಾಲಾ ಮುಖ್ಯೋಪಾಧ್ಯಯರಿಗೆ ಅಭಿನಂದನಾ ಫಲಕಗಳನ್ನು ವಿತರಿಸಲಾಯಿತು.
ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರಾದ ಕಾಶಿನಾಥ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Like this:
Like Loading...
Related